ಮಳೆಹಾನಿ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಿ: ಸರ್ಕಾರ ನಿಯಮಾನುಸಾರ ಪರಿಹಾರ ನೀಡಲಿದೆ: ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ತಾಕೀತು

Spread the love

ಧಾರವಾಡ: ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ನಿಯಮಾನುಸಾರ ಪರಿಹಾರ ನೀಡಲಿದೆ. ಪರಿಹಾರ ಕಾರ್ಯಗಳಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಿಖರ ಸಮೀಕ್ಷೆಯನ್ನು ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.

ಸಮೀಕ್ಷಾ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಬೇಕು. ಜಿಲ್ಲೆಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮತ್ತು ಸಂತ್ರಸ್ತರಿಗೆ ಶೀಘ್ರ ನ್ಯಾಯ ಒದಗಿಸಲು ಬೆಳೆ ಸಮೀಕ್ಷೆ ಕಾರ್ಯ ಸಹಾಯಕವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ ನೀಡಿರುವ ಪ್ರಾಥಮಿಕ ವರದಿಯ ಪ್ರಕಾರ, 79,697 ಹೆಕ್ಟೇರ್ ಹೆಸರು ಬೆಳೆ, 6,550 ಹೆಕ್ಟೇರ್ ಉದ್ದು ಬೆಳೆ, 7,250 ಹೆಕ್ಟೇರ್ ಸೋಯಾಅವರೆ ಬೆಳೆ, 50 ಹೆಕ್ಟೇರ್ ಮುಸುಕಿನ ಜೋಳ ಸೇರಿದಂತೆ ಸರಿಸುಮಾರು 93,547 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ಅಲ್ಲದೆ, ತೋಟಗಾರಿಕಾ ಬೆಳೆಗಳಾದ 915 ಹೆಕ್ಟೇರ್ ಒಣಮೆಣಸಿನಕಾಯಿ, 2,920 ಹೆಕ್ಟೇರ್ ಈರುಳ್ಳಿ, 230 ಹೆಕ್ಟೇರ್ ಬೆಳ್ಳುಳ್ಳಿ ಸೇರಿದಂತೆ ಒಟ್ಟು ಸರಿಸುಮಾರು 4,065 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು. ಒಟ್ಟಾರೆಯಾಗಿ 97,612 ಹೆಕ್ಟೇರ್ ಪ್ರದೇಶದ ವಿವಿಧ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದೇ ವೇಳೆ, ಆಗಸ್ಟ್ ತಿಂಗಳ ಮಳೆಯಿಂದಾಗಿ 223 ಮನೆಗಳು ಹಾನಿಯಾದ ಪ್ರಕರಣಗಳು ವರದಿಯಾಗಿದ್ದು, ಕಂದಾಯ ಮತ್ತು ಇತರ ಇಲಾಖೆಗಳ ಜಂಟಿ ಸಮಿತಿ ಪರಿಶೀಲನೆಯ ನಂತರ 81 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಉಳಿದ 128 ಮನೆ ಹಾನಿ ಪ್ರಕರಣಗಳ ಪೈಕಿ ಶೇ. ನೋಡಿಕೊಂಡು ನಿಯಮಾನುಸಾರ ಪರಿಹಾರ ನೀಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಕಳೆದ 15 ದಿನಗಳಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಸೋಮವಾರ ಸಂಜೆಯೊಳಗೆ ಸಮೀಕ್ಷೆಯ ಪೂರ್ಣ ವರದಿಯನ್ನು ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚಿಸಿದರು. ವರದಿ ಪಡೆದ ನಂತರ, ರೈತರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗುವುದು. ಬೆಳೆ ಹಾನಿ ಆಗಿರುವ ಎಲ್ಲ ರೈತರಿಗೂ ಪರಿಹಾರ ಸಿಗುವಂತೆ ಅಧಿಕಾರಿಗಳು ಸಮರ್ಪಕವಾಗಿ ಸಮೀಕ್ಷೆ ನಡೆಸಬೇಕು ಎಂದು ಅವರು ನಿರ್ದೇಶನ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಶಾಸಕರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತವು ಶೀಘ್ರವಾಗಿ ಹಾನಿ ಸಮೀಕ್ಷೆ ವರದಿ ಸಲ್ಲಿಸಿ, ರೈತರಿಗೆ ಪರಿಹಾರ ಬರುವಂತೆ ಕ್ರಮವಹಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಎನ್.ಎಚ್. ಕೋನರೆಡ್ಡಿ, ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ತಹಶಿಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *