ನಾಗರಿಕಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ

Spread the love

ಧಾರವಾಡ, ಜೂ.11: ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ಒದಗಿಸುವ ಮೂಲಕ ನಾಗರಿಕಸ್ನೇಹಿ ಆಡಳಿತಕ್ಕೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ ವಿ. ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2026ರ ಮುಂಗಾರು ಪರಿಸ್ಥಿತಿಯನ್ನು ಎದುರಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಳ್ಳಬೇಕಾದ ಪೂರ್ವಸಿದ್ಧತಾ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಎಲ್ಲ ರೈತರು ಕಡ್ಡಾಯವಾಗಿ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಯಾವುದೇ ರೈತರು ನೋಂದಣಿ ಪ್ರಕ್ರಿಯೆಯಿಂದ ಹೊರಗುಳಿಯದಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತ್ವರಿತವಾಗಿ ಪರಿಹರಿಸಬೇಕು ಎಂದು ತಿಳಿಸಿದರು. ರೈತರ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.

‘ನಮ್ಮ ಹೊಲ-ನಮ್ಮ ದಾರಿ’ ಯೋಜನೆಯಡಿ ಕೃಷಿ ಜಮೀನುಗಳಿಗೆ ಸಂಪರ್ಕ ರಸ್ತೆ ನಿರ್ಮಾಣ, ಗ್ರಾಮೀಣ ರಸ್ತೆಗಳು ಹಾಗೂ ಸೇತುವೆಗಳ ಗುಣಮಟ್ಟ ಕಾಪಾಡುವ ಕೆಲಸಕ್ಕೆ ಆದ್ಯತೆ ನೀಡಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 56,593 ಇ-ಪೌತಿ ಖಾತೆಗಳಿದ್ದು, ಅವುಗಳಲ್ಲಿ 12,519 ಖಾತೆಗಳ ಪ್ರಕ್ರಿಯೆ ಬಾಕಿಯಿದೆ. ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಮರಣ ಹೊಂದಿದವರ ಮಾಹಿತಿ ಸಂಗ್ರಹಿಸಿ ಖಾತೆ ಬದಲಾವಣೆಯ ಪ್ರಕ್ರಿಯೆಗಳನ್ನು ವೇಗಗೊಳಿಸಬೇಕು ಎಂದು ಹೇಳಿದರು.

ಕೆರೆಗಳ ಸ್ವಚ್ಛತೆ, ಉದ್ಯಾನವನಗಳ ಅಭಿವೃದ್ಧಿ, ಆರೋಗ್ಯ, ಕೃಷಿ, ತೋಟಗಾರಿಕೆ ಹಾಗೂ ನಗರಾಭಿವೃದ್ಧಿ ಇಲಾಖೆಗಳ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಉದ್ಯೋಗಾವಕಾಶ ಸೃಷ್ಟಿಸುವ ಕಾರ್ಯ ಕೈಗೊಳ್ಳಬೇಕು. ಕಸ ವಿಲೇವಾರಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಧಾರವಾಡ ಜಿಲ್ಲೆಯ ಎಂಟು ತಾಲೂಕುಗಳ ಪೈಕಿ ಕಲಘಟಗಿ ಮತ್ತು ಅಣ್ಣಿಗೇರಿ ತಾಲೂಕುಗಳು ಮಲೆನಾಡು ಪ್ರದೇಶಗಳಾಗಿದ್ದು, ಧಾರವಾಡ ತಾಲೂಕಿನ ಕೆಲವು ಗ್ರಾಮಗಳು ಮಲೆನಾಡು ಹಾಗೂ ಬಯಲುಸೀಮೆ ವ್ಯಾಪ್ತಿಗೆ ಸೇರಿವೆ. ಹುಬ್ಬಳ್ಳಿ, ನವಲಗುಂದ ಹಾಗೂ ಕುಂದಗೋಳ ತಾಲೂಕುಗಳು ಬಯಲುಸೀಮೆ ಪ್ರದೇಶಗಳಾಗಿವೆ. ಕುಂದಗೋಳ, ಹುಬ್ಬಳ್ಳಿ, ನವಲಗುಂದ ಹಾಗೂ ಧಾರವಾಡ ತಾಲೂಕುಗಳ ಮೂಲಕ ಹರಿಯುವ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಮಳೆಗಾಲದಲ್ಲಿ ಉಕ್ಕಿ ಹರಿದು ಪ್ರವಾಹ ಪರಿಸ್ಥಿತಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಪ್ರವಾಹ ಸಾಧ್ಯತೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲೆಯ ಒಟ್ಟು 35 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 56 ಗ್ರಾಮಗಳು ಪ್ರವಾಹದ ಅಪಾಯಕ್ಕೆ ಒಳಪಡುವ ಸಾಧ್ಯತೆ ಇದೆ. ಸುಮಾರು 2.25 ಲಕ್ಷ ಜನಸಂಖ್ಯೆ, 80 ಸಾವಿರಕ್ಕೂ ಅಧಿಕ ಜಾನುವಾರುಗಳು ಹಾಗೂ 2.08 ಲಕ್ಷ ಎಕರೆ ಕೃಷಿ ಜಮೀನು ಈ ವ್ಯಾಪ್ತಿಯಲ್ಲಿ ಬರುತ್ತವೆ. ಮುನ್ನೆಚ್ಚರಿಕಾ ಕ್ರಮವಾಗಿ 71 ಕಾಳಜಿ ಕೇಂದ್ರಗಳು ಹಾಗೂ 6 ಗೋಶಾಲೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಲಾಯಿತು.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಲೈಫ್ ಜಾಕೆಟ್‌ಗಳು, ರಕ್ಷಣಾ ದೋಣಿಗಳು, ಚೈನ್‌ಸಾಗಳು, ನೈಲಾನ್ ಹಗ್ಗಗಳು, ಪೋರ್ಟಬಲ್ ಪಂಪ್‌ಗಳು ಸೇರಿದಂತೆ ಅಗತ್ಯ ರಕ್ಷಣಾ ಉಪಕರಣಗಳು ಲಭ್ಯವಿವೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಜಿಲ್ಲೆಯಲ್ಲಿ 2.33 ಲಕ್ಷ ದನ ಮತ್ತು ಎಮ್ಮೆಗಳು ಹಾಗೂ 1.53 ಲಕ್ಷ ಕುರಿ ಮತ್ತು ಮೇಕೆಗಳಿದ್ದು, ಪ್ರಸ್ತುತ 4.75 ಲಕ್ಷ ಟನ್ ಮೇವು ದಾಸ್ತಾನು ಲಭ್ಯವಿದ್ದು, ಮುಂದಿನ 45 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕುಡಿಯುವ ನೀರಿನ ಪರಿಸ್ಥಿತಿಯ ಕುರಿತು ಮಾತನಾಡಿದ ಅಧಿಕಾರಿಗಳು, ಧಾರವಾಡ, ಹುಬ್ಬಳ್ಳಿ ಮತ್ತು ಕಲಘಟಗಿ ತಾಲೂಕುಗಳ 22 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, 27 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 100 ವಾರ್ಡ್‌ಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಅವಶ್ಯಕತೆ ಎದುರಾಗಿಲ್ಲ. 80 ವಾರ್ಡ್‌ಗಳಲ್ಲಿ ಪ್ರತಿದಿನ ಹಾಗೂ ಉಳಿದ 20 ವಾರ್ಡ್‌ಗಳಲ್ಲಿ ಎರಡು ರಿಂದ ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್‌ಗಳಲ್ಲಿ 13 ವಾರ್ಡ್‌ಗಳಿಗೆ 24×7 ನೀರು ಪೂರೈಕೆ ನಡೆಯುತ್ತಿದ್ದು, ಉಳಿದ ವಾರ್ಡ್‌ಗಳಿಗೆ ಎರಡು ರಿಂದ ಏಳು ದಿನಗಳ ಅಂತರದಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *