
ಧಾರವಾಡ: ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನೊಂದ ಮಹಿಳೆಯರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮಹಿಳೆಯರ ಸುರಕ್ಷತೆ, ಸೈಬರ್ ಜಾಗೃತಿ ಹಾಗೂ ಮಹಿಳಾ ಹಕ್ಕುಗಳ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅವರು ಹೇಳಿದರು. ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ‘ಶೀ ಬಾಕ್ಸ್’ ಅಳವಡಿಕೆಯನ್ನು ಕಡ್ಡಾಯಗೊಳಿಸಬೇಕು. ಮಹಿಳೆಯರ ಮೇಲಿನ ಕಿರುಕುಳ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಂದಾಯ ಹಾಗೂ ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಹಿಳೆಯರ ಘನತೆ ಮತ್ತು ಸುರಕ್ಷತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಅಧಿಕಾರಿಗಳು ಸಂವೇದನಾಶೀಲತೆಯಿಂದ ವರ್ತಿಸಬೇಕು ಎಂದು ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳು, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಮಹಿಳಾ ಸಹಾಯವಾಣಿ, ಶೀ ಬಾಕ್ಸ್ ಮತ್ತು ದೂರು ನಿವಾರಣಾ ಸಮಿತಿಗಳ ಕುರಿತು ಮಾಹಿತಿ ಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ‘ಅಕ್ಕಾ ಪಡೆ’ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ರಕ್ಷಣೆ ಮತ್ತು ಜಾಗೃತಿಯಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಪ್ರಶಂಸಿಸಿದ ಅವರು, ಅಕ್ಕಾ ಪಡೆ ಸದಸ್ಯರೊಂದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಸಮಸ್ಯೆಗಳು ಮತ್ತು ಚಟುವಟಿಕೆಗಳ ಕುರಿತು ಚರ್ಚಿಸಬೇಕು ಎಂದರು.
ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಬೇಕು. ಸಾಮಾಜಿಕ ಜಾಲತಾಣಗಳ ದುರುಪಯೋಗ, ಆನ್ಲೈನ್ ವಂಚನೆ ಹಾಗೂ ಡಿಜಿಟಲ್ ಸುರಕ್ಷತೆ ಕುರಿತು ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಪ್ರತಿಯೊಂದು ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್ ಮಾತನಾಡಿ, ಮಹಿಳೆಯರ ಸುರಕ್ಷತೆ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಜಿಲ್ಲಾಡಳಿತವು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಶಾಲೆ, ಕಾಲೇಜು, ಹಾಸ್ಟೆಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸುರಕ್ಷತೆ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಶೀ ಬಾಕ್ಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮಹಿಳೆಯರು ಸಾಲ ಪಡೆಯುವ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗಿಂತ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳ ಮೂಲಕ ಸಾಲ ಪಡೆಯಬೇಕು. ಅಧಿಕ ಬಡ್ಡಿದರ ಹಾಗೂ ಒತ್ತಡದ ವಸೂಲಾತಿಯಿಂದ ಮಹಿಳೆಯರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸಾಲ ಪಡೆಯುವ ಮೊದಲು ಅದರ ನಿಯಮಗಳು ಮತ್ತು ಮರುಪಾವತಿ ಅವಧಿಯನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಡ್ರಗ್ಸ್ ವಿರುದ್ಧ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ ಕಟ್ಟುನಿಟ್ಟಿನ ನಿಗಾವಹಿಸಿ ಡ್ರಗ್ಸ್ ಜಾಲದ ವಿರುದ್ಧ ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶೃತಿ ಎನ್.ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಡೆದ ಮಹಿಳಾ ಸ್ಪಂದನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 200ಕ್ಕೂ ಹೆಚ್ಚು ಮಹಿಳೆಯರು ತಮ್ಮ ವೈಯಕ್ತಿಕ ಅಹವಾಲುಗಳನ್ನು ಸಲ್ಲಿಸಿದರು. ಆಸ್ತಿ ವಿವಾದ, ಗೃಹ ಹಿಂಸೆ, ಪತಿ ಪರಿತ್ಯಾಗ, ಕುಟುಂಬ ಕಲಹ, ಜಮೀನು ವಿವಾದ, ಮಹಿಳಾ ಸುರಕ್ಷತೆ, ಪಿಂಚಣಿ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು.
ಅಹವಾಲುಗಳನ್ನು ಪರಿಶೀಲಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದ್ದು, ತುರ್ತು ಪ್ರಕರಣಗಳನ್ನು ಸಂಬಂಧಿತ ಇಲಾಖೆಗೆ ವರ್ಗಾಯಿಸಿ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

