ಧಾರವಾಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಮೆರವಣಿಗೆ: ಸಚಿವ ಸಂತೋಷ ಲಾಡ್ ಚಾಲನೆ

Spread the love

ಧಾರವಾಡ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಅವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಚಾಲನೆ ನೀಡಿದರು. ಮೆರವಣಿಗೆಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರೊಂದಿಗೆ ಚಾಲನೆ ನೀಡಿದ ಸಚಿವರು, ಮಹಾನ್ ಮಾನವತಾವಾದಿಯ ಸ್ಮರಣೆ ಮಾಡಿದರು.

​ವಿವಿಧ ಜಾನಪದ ಕಲಾತಂಡಗಳೊಂದಿಗೆ ಹೊರಟ ಭವ್ಯ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಾದ ಕೋರ್ಟ್ ಸರ್ಕಲ್, ಸಂಗಮ ಸರ್ಕಲ್, ಮದಾರಮಡ್ಡಿ, ಭೂಸಪ್ಪ ಚೌಕ, ಮೇದಾರ ಓಣಿ ಹಾಗೂ ಕೆ.ಸಿ.ಸಿ ಬ್ಯಾಂಕ್ ಮೂಲಕ ಸಂಚರಿಸಿ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನ ತಲುಪಿತು. ಈ ಮೆರವಣಿಗೆಯಲ್ಲಿ ಕರಡಿ ಮಜಲು, ನಂದಿಕೋಲು, ಜಗ್ಗಲಗಿ ಮೇಳ ಸೇರಿದಂತೆ ವೈವಿಧ್ಯಮಯ ಕಲಾತಂಡಗಳು ಪಾಲ್ಗೊಂಡು ಮೆರವಣಿಗೆಯ ಮೆರಗನ್ನು ಹೆಚ್ಚಿಸಿದವು.

​ಇದಕ್ಕೂ ಮುನ್ನ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಆಲೂರು ವೆಂಕಟರಾವ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಸಿಇಒ ಭುವನೇಶ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

​ಕಾರ್ಯಕ್ರಮದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಎಡಿಸಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ, ಗಂಗಾಧರ ದೊಡಮನಿ, ಡಾ. ಎಸ್.ವಿ. ಸಂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *