ಹನೂರು: ಎಲ್ಲೇಮಾಳ ಗಟ್ಟದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Spread the love

ಹನೂರು: ಎಲ್ಲೇಮಾಳ ಗಟ್ಟದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹನೂರು: ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದ ಹನೂರು ಬಫರ್ ವ್ಯಾಪ್ತಿಗೆ ಒಳಪಡುವ ಎಲ್ಲೇಮಾಳ ಗಟ್ಟದ ಸಿಪಿಟಿ-32 ಅರಣ್ಯ ಪ್ರದೇಶದಲ್ಲಿ ಸುಮಾರು 45ರಿಂದ 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಗಸ್ತು ತಿರುಗುತ್ತಿದ್ದ ವೇಳೆ, ಅರಣ್ಯ ಪ್ರದೇಶದ ಸುಜ್ಜಲು ಮರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಮೃತ ವ್ಯಕ್ತಿ ತಿಳಿ ಹಸಿರು ಮತ್ತು ಕಪ್ಪು ಬಣ್ಣದ ಗೆರೆಗಳಿರುವ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಘಟನೆ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಹನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತನ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದವರು ಹನೂರು ಪೊಲೀಸ್ ಠಾಣೆ ಅಥವಾ ಅರಣ್ಯ ಇಲಾಖೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *