
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಾಲಕಿ ಅರ್ನವಿ (11 ವರ್ಷ) ಹಾಗೂ ಯಶ್ (20 ವರ್ಷ) ಎಂದು ಗುರುತಿಸಲಾಗಿದೆ. ಈ ಬಸ್ ಮಹಾರಾಷ್ಟ್ರದ ಸಾಂಗ್ಲಿಯಿಂದ ತಮಿಳುನಾಡು ಕಡೆಗೆ ಹೊರಟಿತ್ತು.
ಘಟನಾ ವಿವರ:
ಮೊಟೇಬೆನ್ನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬಸ್ಸು ಹೋಗುತ್ತಿದ್ದಾಗ, ಎದುರಿಗೆ ಕಾರೊಂದು ಅಡ್ಡ ಬಂದಿದೆ. ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ಸು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಪರಿಣಾಮವಾಗಿ, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

