ಪ್ರತಿಯೊಬ್ಬರ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಅಗತ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

Spread the love

ಧಾರವಾಡ:ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಎನ್ನುವುದು ಸರಕಾರಿ ನೌಕರರಾಗಿರಲಿ ಅಥವಾ ಸಾರ್ವಜನಿಕರಾಗಿರಲಿ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಅಂದಾಗ ಮಾತ್ರ ಸ್ವಸ್ಥ ಮತ್ತು ನೆಮ್ಮದಿಯ ಜೀವನವನ್ನು ಕಾಣಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಸೋಮವಾರದಂದು (ಅ. 27) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆಗಳು ಸಂಯುಕ್ತವಾಗಿ ಆಯೋಜಿಸಿದ್ದ ‘ಜಾಗೃತಿ: ನಮ್ಮ ಒಟ್ಟು ಜವಾಬ್ದಾರಿ’ ಧ್ಯೇಯವಾಕ್ಯದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ವ್ಯಕ್ತಿಯ ವೈಯಕ್ತಿಕ ಮತ್ತು ಸಾರ್ವಜನಿಕ ಜೀವನದಲ್ಲಿ ಅತ್ಯಗತ್ಯ. ಭ್ರಷ್ಟಾಚಾರ ಮತ್ತು ಅನೈತಿಕತೆ ಬಗ್ಗೆ ಜಾಗೃತಿ ಮೂಡಿಸುವ ಇಂದಿನ ಅಗತ್ಯತೆಯ ಕುರಿತು ಸಾರ್ವಜನಿಕ ಚಿಂತನೆ ಅಗತ್ಯವಿದೆ. ಪ್ರತಿ ಹಂತದಲ್ಲೂ ಕಾನೂನಾತ್ಮಕವಾಗಿ ಮತ್ತು ನೈತಿಕವಾಗಿ ಶುದ್ಧ ಜೀವನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕಾನೂನು ಹೇಳುವ ರೀತಿಯಲ್ಲಿ ಎಲ್ಲರೂ ನಡೆದುಕೊಳ್ಳಬೇಕು. ಇದರಿಂದ ಸಾರ್ವಜನಿಕ ಸ್ನೇಹಿ ಆಡಳಿತ ಸಾಧ್ಯವಾಗುತ್ತದೆ. ಸರಕಾರದ ಪ್ರಾಮುಖ್ಯತೆ, ಮಹತ್ವದ ಬಗ್ಗೆ ಅರಿವು ಸರಕಾರಿ ನೌಕರರಿಗೆ ಮೂಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಅವರ ಕೆಲಸದ ಬಗ್ಗೆ ಸುಳ್ಳು ಹೇಳಬಾರದು, ಪ್ರಾಮಾಣಿಕತೆ ಇರಬೇಕು. ಸರಕಾರಿ ಅಧಿಕಾರಿ, ನೌಕರರ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯತೆ ಇರಬೇಕು. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ (ಪ್ರಭಾರ) ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಕುಮಾರ ಸಿ. ಅವರು, “ಭ್ರಷ್ಟಾಚಾರ ಒಂದು ರೀತಿಯ ಕ್ಯಾನ್ಸರ್. ಅದಕ್ಕೆ ಆರಂಭದಲ್ಲೇ ಚಿಕಿತ್ಸೆ ನೀಡಬೇಕು,” ಎಂದರು. ಪ್ರತಿಯೊಬ್ಬ ಸರಕಾರಿ ಅಧಿಕಾರಿ, ನೌಕರರು ತಮ್ಮ ದಿನನಿತ್ಯದ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯತೆ ಅಳವಡಿಸಿಕೊಂಡು ಕಾರ್ಯನಿರ್ವಹಿಸಿದರೆ ಮಾತ್ರ ಉತ್ತಮ ಆಡಳಿತ ಹಾಗೂ ಕಲ್ಯಾಣ ರಾಜ್ಯದ ಕಲ್ಪನೆ ಸಾಧ್ಯ ಎಂದು ಹೇಳಿದರು.

ದಿನನಿತ್ಯದ ಕೆಲಸದಲ್ಲಿ ವೃತ್ತಿಪರತೆ ಇರಬೇಕು. ಸಾರ್ವಜನಿಕರಲ್ಲಿಯೂ ವ್ಯವಸ್ಥೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಹೋರಾಡಬೇಕು. ನೌಕರರು ತಮ್ಮ ಜೀವನದಲ್ಲಿ ಬದ್ಧತೆ ಹೊಂದಿರಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಅವರು ಮಾತನಾಡಿದರು.

ಲೋಕಾಯುಕ್ತ ಸಿಪಿಐ ಪ್ರಭುಲಿಂಗಯ್ಯ ಹಿರೇಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಮತ್ತು ಮೊಹಮ್ಮದಾಲಿ ತಹಸಿಲ್ದಾರ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಸಭಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ವೇದಿಕೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ಧಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ್ ಸಿದ್ದನಗೌಡ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ರವೀಂದ್ರ ಕುರಬಗಟ್ಡಿ, ಪೋಲೀಸ್ ಇನ್ಸ್‌ಪೆಕ್ಟರ್ ಕರುಣೇಶಗೌಡ, ಬಸವರಾಜ ಬುದ್ನಿ, ಪ್ರಸಾದ ಪರಣೇಕರ, ತಹಸೀಲ್ದಾರ್ ಡಿ.ಎಚ್. ಹೂಗಾರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *