​ಅಂಚಟಗೇರಿ ಬಳಿ ಬಸ್-ಬೈಕ್ ಭೀಕರ ಅಪಘಾತ: ತಂದೆ ಮತ್ತು ಮಗು ಸ್ಥಳದಲ್ಲೇ ಸಾವು; ಮತ್ತೊಂದು ಮಗುವಿನ ಸ್ಥಿತಿ ಗಂಭೀರ

Spread the love


ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಮತ್ತೊಂದು ಮಗು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ತಡಸ ಗ್ರಾಮದ ನಿವಾಸಿ ಮೆಹಬೂಬ ಖಾನ್ ಉಸ್ತಾದಿ (36) ಹಾಗೂ ಅವರ ಎರಡು ವರ್ಷದ ಪುತ್ರ ಅಸ್ನೇನ್ ಮೃತಪಟ್ಟ ದುರ್ದೈವಿಗಳು. ಇವರೊಂದಿಗೆ ಪ್ರಯಾಣಿಸುತ್ತಿದ್ದ ನಾಲ್ಕು ವರ್ಷದ ಪುತ್ರಿ ಅಜೀಜಾ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಹಬೂಬ ಖಾನ್ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ತಡಸ ಗ್ರಾಮದ ಕಡೆಗೆ ತೆರಳುತ್ತಿದ್ದಾಗ, ವೇಗವಾಗಿ ಬಂದ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ಭೀಕರ ದೃಶ್ಯ ಕಂಡ ಸ್ಥಳೀಯರು ಮಮ್ಮಲ ಮರುಗಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸುವಲ್ಲಿ ಸಹಕರಿಸಿದ್ದಾರೆ.

ವಿಷಯ ತಿಳಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಸಾರಿಗೆ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಮಾರ್ಗದಲ್ಲಿ ಸಾರಿಗೆ ಬಸ್‌ಗಳು ಹಾಗೂ ಭಾರೀ ವಾಹನಗಳ ಸಂಚಾರ ಅತಿಯಾಗಿದ್ದು, ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸದ್ಯ ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Leave a Reply

Your email address will not be published. Required fields are marked *