
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಲಾಡ್ಡಾಪುರ–ಹಲಕರ್ಟಿ ನಡುವಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ.
ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಯಾದಗಿರಿಯಿಂದ ಇಂಗಳಗಿಗೆ ತೆರಳುತ್ತಿದ್ದ ಕ್ರೂಸರ್ ವಾಹನ ಹಾಗೂ ವಾಡಿಯಿಂದ ಯಾದಗಿರಿಗೆ ಸಾಗುತ್ತಿದ್ದ ಟ್ಯಾಂಕರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಛಿದ್ರಗೊಂಡಿರುವ ದೃಶ್ಯ ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿತು.
ಮೃತರನ್ನು ಇಂಗಳಗಿ ಗ್ರಾಮದ ಮಹೆಬೂಬ ಅಲಿ (42), ತೊಲಾ ಭಾಷಾ (30), ಹುಸೇನ್ ಶಾಹಾಪುರ (47), ರಸೂಲಬಿ (43) ಹಾಗೂ ಫಾತಿಮಾ (40) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಪರಸ್ಪರ ಸಂಬಂಧಿಕರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ದುರ್ಘಟನೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಂಗಳಗಿ ಗ್ರಾಮದ ಐವರು ಮೃತಪಟ್ಟಿರುವ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರಕಲಿ,” ಎಂದು ಹೇಳಿದ್ದಾರೆ.

