ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ: ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ರಾಜೇಂದ್ರ ಪ್ರಸಾದ್ ಅವರಿಗೆ ತೀವ್ರ ಗಾಯಗಳಾಗಿವೆ.

​ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸದ ನಿಮಿತ್ತ ಮಂಜುನಾಥ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮಂಜುನಾಥ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

​ರಾಜೇಂದ್ರ ಪ್ರಸಾದ್ ಅವರು ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಾಜೇಂದ್ರ ಪ್ರಸಾದ್ ಅವರನ್ನು ತಕ್ಷಣವೇ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆಪ್ತ ಕಾರ್ಯದರ್ಶಿಯವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಹಾಗೂ ಸ್ಥಳಕ್ಕೆ ಭೇಟಿ ನೀಡಲು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

​ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *