
ಹನೂರು: ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರಿಗೆ ನಿವೇಶನದ ಜೊತೆಗೆ ಮನೆ ನಿರ್ಮಿಸಿಕೊಡಲು ಆಶ್ರಯ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌರಕಾರ್ಮಿಕರು ಮಳೆ, ಬಿಸಿಲೆನ್ನದೆ ನಿರಂತರವಾಗಿ ಶ್ರಮಿಸಿ ಪಟ್ಟಣವನ್ನು ಸ್ವಚ್ಛವಾಗಿಡುವ ಮೂಲಕ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ಆದ್ಯತೆ
ಹನೂರು ಭಾಗದ ಯುವಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಕೈಗಾರಿಕಾ ಪ್ರದೇಶದ ಅಗತ್ಯವಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಉಡುತೊರೆ ಹಳ್ಳ, ಗುಂಡಾಲ್ ಅಣೆಕಟ್ಟು ಹಾಗೂ ಉಬ್ಬೆಹುಣಸೆ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರು ಸಂಗ್ರಹಿಸಲು ಯೋಜನೆ ರೂಪಿಸಲಾಗುತ್ತಿದೆ. ಉಡುತೊರೆ ಹಳ್ಳ ಯೋಜನೆಗೆ ₹490 ಕೋಟಿ ಅನುದಾನ ಒದಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದರು.
ಹನೂರನ್ನು ಮಾದರಿ ನಗರವನ್ನಾಗಿ ರೂಪಿಸುವ ಗುರಿ
ಹನೂರನ್ನು ಸುಂದರ ಹಾಗೂ ಮಾದರಿ ನಗರವನ್ನಾಗಿ ರೂಪಿಸುವ ಕನಸಿದೆ. ಸರ್ಕಾರ ಪ್ರಸ್ತಾಪಿಸಿರುವ ರಿಂಗ್ ರಸ್ತೆ ಯೋಜನೆಯಿಂದ ಪಟ್ಟಣದ ಸಂಚಾರ ವ್ಯವಸ್ಥೆ ಸುಧಾರಿಸಲಿದೆ. ಪ್ರತಿ ಮನೆಗೂ ಕಾವೇರಿ ಕುಡಿಯುವ ನೀರು ಹಾಗೂ ಒಳಚರಂಡಿ (ಯುಜಿಡಿ) ವ್ಯವಸ್ಥೆ ಕಲ್ಪಿಸಿದ ಬಳಿಕ ಮಾದರಿ ರಸ್ತೆಗಳು, ಪಾದಚಾರಿ ಮಾರ್ಗಗಳು ಮತ್ತು ಆಕರ್ಷಕ ವಿದ್ಯುತ್ ಕಂಬಗಳನ್ನು ಅಳವಡಿಸುವ ಮೂಲಕ ಪಟ್ಟಣದ ಸೌಂದರ್ಯ ಹೆಚ್ಚಿಸಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಚಪ್ಪ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ತಹಸೀಲ್ದಾರ್ ಚೈತ್ರಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

