ಹುಬ್ಬಳ್ಳಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಪೊಲೀಸ್ ದರ್ಪದ ಆರೋಪ; ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಕ್ಕೆ ಆಕ್ರೋಶ

Spread the love

ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಈ ಅಮಾನುಷ ಕೃತ್ಯಕ್ಕೆ ಎಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

​ಮಾಜಿ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದು ಇತ್ತೀಚೆಗೆ ಬಿಜೆಪಿ ಸೇರಿದ್ದ ಸುಜಾತಾ (ಅಲಿಯಾಸ್ ವಿಜಯಲಕ್ಷ್ಮಿ) ಹಂಡಿ ಎಂಬುವವರೇ ಪೊಲೀಸರ ಈ ದೌರ್ಜನ್ಯಕ್ಕೆ ಒಳಗಾದವರು ಎನ್ನಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸುಜಾತಾ ಅವರು ಅಧಿಕಾರಿಗಳ ಜೊತೆಗೂಡಿ ಬಿ.ಎಲ್.ಒಗಳನ್ನು ಕರೆತಂದು ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ವಿಕೋಪಕ್ಕೆ ತಿರುಗಿತ್ತು. ಈ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಒಬ್ಬರು ನೀಡಿದ ದೂರಿನನ್ವಯ ಪೊಲೀಸರು ಸುಜಾತಾ ಹಂಡಿ ಅವರನ್ನು ಬಂಧಿಸಲು ಮುಂದಾಗಿದ್ದರು.

​ಬಂಧನದ ವೇಳೆ ಸುಜಾತಾ ಅವರು ಪ್ರತಿರೋಧ ತೋರಿದ್ದಾರೆ ಎಂಬ ನೆಪವನ್ನಿಟ್ಟುಕೊಂಡು, ಪೊಲೀಸರು ಮಹಿಳೆಯೆಂದು ನೋಡದೆ ಅವರನ್ನು ವಿವಸ್ತ್ರಗೊಳಿಸಿ ಮನಬಂದಂತೆ ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಮಹಿಳೆಯ ಮೇಲೆ ಇಂತಹ ಕೃತ್ಯವೆಸಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *