
ನವಲಗುಂದ: ಶಿಕ್ಷಣ ಸಂಸ್ಥೆಗಳು ಕೇವಲ ಅಂಕ ಗಳಿಸುವ ಯಂತ್ರಗಳನ್ನು ಸೃಷ್ಟಿಸದೆ, ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರಯುತ ಬದುಕನ್ನು ಕಲಿಸಿಕೊಡುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಅವರು ಹೇಳಿದರು.
ಸ್ಥಳೀಯ ನ್ಯೂ ಆಕಾಶ ಲಿಟಲ್ ಕಿಡ್ಸ್ ಹಾಗೂ ಎ.ಬಿ. ಬಾಗಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ತೀವ್ರ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ನೀಡಿದರೆ ಸಾಲದು, ಅವರಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಬೇಕು. ವಾಸ್ತವಿಕ ಶಿಕ್ಷಣದ ಮೂಲಕ ಮಕ್ಕಳನ್ನು ಕ್ರಿಯಾಶೀಲರನ್ನಾಗಿ ರೂಪಿಸಬೇಕಿದೆ. ಇಂತಹ ಮಹತ್ತರ ಜವಾಬ್ದಾರಿಯನ್ನು ಹೊತ್ತು ಬೋಧನೆ ಮಾಡುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಅವರು, ಶಾಲೆಗಳು ಜ್ಞಾನದ ದೇಗುಲಗಳಿದ್ದಂತೆ. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾದುದು. ಇಂದಿನ ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಬದುಕಿಗೆ ಬೇಕಾದ ಕೌಶಲ್ಯಯುತ ಹಾಗೂ ವೃತ್ತಿ ಆಧಾರಿತ ಶಿಕ್ಷಣ ಶಾಲೆಗಳಿಂದ ದೊರೆಯಬೇಕಿದೆ. ಶಾಲೆಗಳು ಮಕ್ಕಳನ್ನು ಆಕರ್ಷಿಸುವ ಸುಂದರ ತಾಣಗಳಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಮೂಲಕ ಅವರ ಬದುಕಿಗೆ ದಾರಿದೀಪವಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ತುಪ್ಪದಕುರಹಟ್ಟಿ ಭೂಸೂನೂರು ಮಠದ ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ಬಾಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎ.ಬಿ. ಕೊಪ್ಪದ, ಆಕಾಶ ಫೌಂಡೇಶನ್ ಚೇರಮನ್ ಹನಮಂತಪ್ಪ ಹಳ್ಳಿಕೇರಿ, ಎಸ್.ಎಂ. ಪಟ್ಟಣಶೆಟ್ಟಿ, ಶರಣು ಪೂಜಾರ, ಸಂಸ್ಥೆಯ ಕಾರ್ಯದರ್ಶಿ ವಿಜಯಮಹಾಂತೇಶ್ ಬಾಗಿ, ಮ್ಯಾನೇಜಿಂಗ್ ಡೈರೆಕ್ಟರ್ ಆಕಾಶ ಹಳ್ಳಿಕೇರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಪಾಟೀಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಗಣ್ಯರಿಗೆ ಸನ್ಮಾನ ಜರುಗಿತು. ತದನಂತರ ಶಾಲಾ ಮಕ್ಕಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪಾಲಕರ ಹಾಗೂ ಸಾರ್ವಜನಿಕರ ಮನಸೂರೆಗೊಂಡವು.

