

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಸ್ತೆ ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.
ಪ್ರತಿಭಟನೆಯ ಹಿನ್ನೆಲೆ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನ್ಯಾ. ನಾಗಮೋಹನ್ ದಾಸ್ ಸಮಿತಿ ವರದಿಯ ಆಧಾರದ ಮೇಲೆ ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಎಡಗೈ, ಬಲಗೈ ಮತ್ತು ಸ್ಪೃಶ್ಯ ಜಾತಿಗಳಿಗೆ ಪ್ರತ್ಯೇಕವಾಗಿ ಹಂಚಿಕೆ ಮಾಡುವ ತೀರ್ಮಾನ ಘೋಷಿಸಿದ್ದರು. ಈ ತೀರ್ಮಾನದ ಪ್ರಕಾರ, ಎಡಗೈ ಸಮುದಾಯಕ್ಕೆ ಶೇ. 6, ಬಲಗೈ ಸಮುದಾಯಕ್ಕೆ ಶೇ. 6 ಹಾಗೂ ಸ್ಪೃಶ್ಯ ಜಾತಿಗಳಾದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ. 5ರಷ್ಟು ಮೀಸಲಾತಿ ನೀಡಲಾಗಿದೆ. ಈ ಹಂಚಿಕೆಯಿಂದ ತಮಗೆ ತೀವ್ರ ಅನ್ಯಾಯವಾಗಿದೆ ಎಂದು ಸ್ಪೃಶ್ಯ ಜಾತಿಗಳ ಜನರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಬಿರುಸಿನ ಪ್ರತಿಭಟನೆ:
ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ತೀವ್ರಗೊಂಡಾಗ ಪ್ರತಿಭಟನಾಕಾರರು ಸರ್ಕಾರದ ಪ್ರತಿಕೃತಿ ದಹಿಸಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ವೇಳೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದ್ದು, ಕೂಡಲೇ ಅವರನ್ನು ನಿಯಂತ್ರಿಸಲಾಯಿತು.
ರಸ್ತೆ ತಡೆ, ಟ್ರಾಫಿಕ್ ಜಾಮ್:
ಪ್ರತಿಭಟನಾಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರಿಂದ, ಕೆ.ಆರ್. ಸರ್ಕಲ್ ಬಳಿ ವಾಹನಗಳು ಕಿಲೋಮೀಟರ್‌ಗಟ್ಟಲೆ ನಿಂತು ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಪೊಲೀಸರು ರಸ್ತೆ ತೆರವುಗೊಳಿಸಲು ಹರಸಾಹಸ ಪಟ್ಟರು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯ ಶೇ. 17 ರಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವಂತೆ ನ್ಯಾ. ನಾಗಮೋಹನ್‌ದಾಸ್ ಸಮಿತಿ ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸುಗಳಿಂದ ನಮಗೆ ಅನ್ಯಾಯವಾಗಿದೆ ಎಂದು ಈ ಸಮುದಾಯಗಳು ಈಗ ಪ್ರತಿಭಟನೆಗಿಳಿದಿವೆ. ಮುಂದಿನ ದಿನಗಳಲ್ಲಿ ಸರ್ಕಾರದ ಪ್ರತಿಕ್ರಿಯೆ ಮತ್ತು ಈ ಸಮುದಾಯಗಳ ಬೇಡಿಕೆಗಳ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

