
ಹನೂರು: ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಹರ್ಷಿತಾ ಹಾಗೂ ಅವರ ಕುಟುಂಬವನ್ನು ಶಾಸಕ ಎಂ.ಆರ್. ಮಂಜುನಾಥ್ ಭೇಟಿ ಮಾಡಿ ಧೈರ್ಯ ತುಂಬಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹನೂರು ತಾಲೂಕಿನ ಮಿಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಕೆರೆ ದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುಮಾರು 8 ಗಂಟೆ ವೇಳೆಗೆ ಮನೆಯ ಮುಂಭಾಗ ಅಜ್ಜಿ ಶಿವಮ್ಮ ಹಾಗೂ ಮೊಮ್ಮಗಳು ಹರ್ಷಿತಾ ಕುಳಿತಿದ್ದಾಗ ಏಕಾಏಕಿ ಚಿರತೆ ದಾಳಿ ನಡೆಸಿತ್ತು. ದಾಳಿಯಲ್ಲಿ ಹರ್ಷಿತಾ ತೀವ್ರವಾಗಿ ಗಾಯಗೊಂಡಿದ್ದು, ಕೂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆಯ ಮಾಹಿತಿ ತಿಳಿದ ತಕ್ಷಣವೇ ಶಾಸಕ ಎಂ.ಆರ್. ಮಂಜುನಾಥ್ ಅವರು ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಗಾಯಾಳುಗಳ ಚಿಕಿತ್ಸೆಯನ್ನು ಅರಣ್ಯ ಇಲಾಖೆಯ ವತಿಯಿಂದಲೇ ಒದಗಿಸುವಂತೆ ಸೂಚಿಸಿದ್ದರು. ಅದರಂತೆ ಅರಣ್ಯ ಇಲಾಖೆ ಚಿಕಿತ್ಸೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗಿರುವ ಹಿನ್ನೆಲೆಯಲ್ಲಿ ಹರ್ಷಿತಾ ಚೇತರಿಸಿಕೊಳ್ಳುತ್ತಿದ್ದಾರೆ.
ಭಾನುವಾರ ಮಧ್ಯಾಹ್ನ ಹೋಲಿ ಕ್ರಾಸ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಂದ ಘಟನೆಯ ವಿವರ ಪಡೆದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಕಾಡಂಚಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ಪ್ರತಿದಿನ ರಾತ್ರಿ ಗಸ್ತು ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗುವುದು ಎಂದು ತಿಳಿಸಿದ ಅವರು, ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ರಾತ್ರಿ ವೇಳೆ ಮನೆಯ ಹೊರಗೆ ಬರಬೇಕು, ಇಲ್ಲದಿದ್ದರೆ ಮನೆಯೊಳಗೇ ಸುರಕ್ಷಿತವಾಗಿರುವಂತೆ ಸಲಹೆ ನೀಡಿದರು.
ಈ ವೇಳೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಭಾಸ್ಕರ್, ಎಸ್ಎಫ್ ವಿರಾಜ್, ಹೂಗ್ಯಂ ವಲಯ ಅರಣ್ಯಾಧಿಕಾರಿ ಜಿತೇಂದ್ರ, ಗಾಯಾಳು ಬಾಲಕಿಯ ತಂದೆ ಮಹೇಂದ್ರ, ಮುಖಂಡರಾದ ಮಂಜೇಶ್, ಮಹದೇವ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಕಾರ್ತಿಕ್ ಗೌಡ ಹನೂರು.

