ಮುಂಗಾರು ಮಳೆ ಮುನ್ನೆಚ್ಚರಿಕೆ; ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

Spread the love

ಧಾರವಾಡ, ಜೂ.12: ಮುಂಗಾರು ಹಂಗಾಮಿನ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಅಗತ್ಯ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಸ್ನೇಹಲ್ ಆರ್. ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಪ್ರದೇಶಗಳ 21 ಗ್ರಾಮಗಳಲ್ಲಿ 25 ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಅಗತ್ಯ ಉಂಟಾಗಿಲ್ಲ ಎಂದು ಹೇಳಿದ್ದಾರೆ.

ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭಾ ಜಲಾಶಯದ ಕಾಲುವೆಗಳ ಮೂಲಕ 60 ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಲಾಗಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಲಭ್ಯತೆ ಖಚಿತಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 100 ವಾರ್ಡುಗಳಲ್ಲಿ ಪ್ರಸ್ತುತ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪರಿಸ್ಥಿತಿ ಇಲ್ಲ. 80 ವಾರ್ಡುಗಳಲ್ಲಿ ಪ್ರತಿದಿನ ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ 20 ವಾರ್ಡುಗಳಲ್ಲಿ ಎರಡು ರಿಂದ ಮೂರು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೆರೆಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡುಗಳಲ್ಲಿ 13 ವಾರ್ಡುಗಳಿಗೆ 24×7 ನೀರು ಪೂರೈಕೆ ಮಾಡಲಾಗುತ್ತಿದ್ದು, ಉಳಿದ ವಾರ್ಡುಗಳಿಗೆ ಎರಡು ರಿಂದ ಏಳು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ 53 ನೀರು ಪೂರೈಕೆ ಟ್ಯಾಂಕರ್‌ಗಳನ್ನು ಸಿದ್ಧವಾಗಿರಿಸಲಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಹಾಯವಾಣಿ 7996666247, ಜಿಲ್ಲಾ ಪಂಚಾಯತ್ ಸಹಾಯವಾಣಿ 0836-274221 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ 0836-2445508 ಅಥವಾ 1077 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ 2,33,464 ಜಾನುವಾರುಗಳಿದ್ದು, 4,65,076.81 ಟನ್ ಮೇವು ಲಭ್ಯವಿದೆ. ಇದರಿಂದ ಸುಮಾರು 45 ವಾರಗಳವರೆಗೆ ಜಾನುವಾರುಗಳಿಗೆ ಮೇವು ಪೂರೈಕೆ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿಯೂ ಯಾವುದೇ ತಾಲ್ಲೂಕಿನಲ್ಲಿ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ 11ರವರೆಗೆ ಜಿಲ್ಲೆಯಲ್ಲಿ 40.6 ಮಿ.ಮೀ. ವಾಡಿಕೆ ಮಳೆಯಾಗಬೇಕಿದ್ದರೆ, 66.4 ಮಿ.ಮೀ. ಮಳೆಯಾಗಿದ್ದು, ಶೇ.64ರಷ್ಟು ಅಧಿಕ ಮಳೆ ದಾಖಲಾಗಿದೆ. ಪೂರ್ವ ಮುಂಗಾರು ಅವಧಿಯಲ್ಲಿ ಧಾರವಾಡ ತಾಲ್ಲೂಕಿನಲ್ಲಿ ಗುಡುಗು-ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಅವರ ವಾರಸುದಾರರಿಗೆ ₹5 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು.

ಅದೇ ರೀತಿ ಜಿಲ್ಲೆಯಲ್ಲಿ 12 ದೊಡ್ಡ ಹಾಗೂ 70 ಸಣ್ಣ ಜಾನುವಾರುಗಳು ಮೃತಪಟ್ಟಿದ್ದು, ಸಂಬಂಧಿತ ಜಾನುವಾರು ಮಾಲೀಕರಿಗೆ ಒಟ್ಟು ₹6.60 ಲಕ್ಷ ಪರಿಹಾರವನ್ನು ಜಿಲ್ಲಾಡಳಿತದಿಂದ ವಿತರಿಸಲಾಗಿದೆ. ನವಲಗುಂದ ತಾಲ್ಲೂಕಿನಲ್ಲಿ ಒಂದು ಮನೆ ಸಂಪೂರ್ಣ ಹಾನಿಗೊಳಗಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ₹1.20 ಲಕ್ಷ ಪರಿಹಾರ ನೀಡಲಾಗಿದೆ. ಜೊತೆಗೆ ಹುಬ್ಬಳ್ಳಿ ತಾಲ್ಲೂಕಿನಲ್ಲಿ ಒಂದು, ಕಲಘಟಗಿ ತಾಲ್ಲೂಕಿನಲ್ಲಿ ಎರಡು ಹಾಗೂ ಹುಬ್ಬಳ್ಳಿ ನಗರದಲ್ಲಿ ಮೂರು ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಅರ್ಹ ಫಲಾನುಭವಿಗಳಿಗೆ ತಲಾ ₹6,500ರಂತೆ ಒಟ್ಟು ₹39 ಸಾವಿರ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *