
ಮುಂಡರಗಿ: ತಾಲ್ಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹೊಲದಲ್ಲಿ ರಾಶಿ ಹಾಕಿದ್ದ ಸುಮಾರು ನೂರು ಟ್ರ್ಯಾಕ್ಟರ್ ಮೆಕ್ಕೆಜೋಳದ ತೆನೆಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಸುಟ್ಟು ಭಸ್ಮವಾಗಿದೆ.
ತಾಂಡಾದ ರೈತ ಗಣೇಶ ಧನಶಿಂಗ್ ಚವ್ಹಾಣ್ ಅವರಿಗೆ ಸೇರಿದ ಸುಮಾರು 50 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಕಟಾವು ಮಾಡಿ ರಾಶಿ ಹಾಕಲಾಗಿತ್ತು. ದುಷ್ಕರ್ಮಿಗಳು ಈ ಮೆಕ್ಕೆಜೋಳದ ರಾಶಿಗೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ಸುಟ್ಟು ಕರಕಲಾಗುತ್ತಿರುವುದನ್ನು ಕಂಡು ರೈತ ಅಕ್ಷರಶಃ ಕಂಗಾಲಾಗಿದ್ದಾರೆ.
ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ಘಟನೆಯು ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

