ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎಗೆ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಮುಖಬಂಗ, ಎ.ಪಿ. ರಂಗನಾಥ್‌ಗೆ ಗೆಲುವು

Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್‌-ಬಿಜೆಪಿ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಅಭ್ಯರ್ಥಿ ಪುಟ್ಟಣ್ಣ ಅವರನ್ನು 908 ಮತಗಳ ಅಂತರದಿಂದ ಸೋಲಿಸುವ ಮೂಲಕ ರಂಗನಾಥ್ ಅವರು ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಆಡಳಿತಾರೂಢ ಕಾಂಗ್ರೆಸ್‌ಗೆ ಹಿನ್ನಡೆಯನ್ನುಂಟು ಮಾಡಿದೆ.

ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಚುನಾವಣಾಧಿಕಾರಿಗಳು ಎ.ಪಿ. ರಂಗನಾಥ್ ಅವರ ಗೆಲುವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಹಲವು ವರ್ಷಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಈ ಬಾರಿ ಸೋಲುಂಟಾಗಿದ್ದು, ಚುನಾವಣಾ ಫಲಿತಾಂಶ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದು, ಅವರಲ್ಲಿ 22,468 ಮಂದಿ ಮತ ಚಲಾಯಿಸಿದ್ದರು. ಎಣಿಕೆ ವೇಳೆ 20,611 ಮತಗಳು ಸಿಂಧುವಾಗಿದ್ದರೆ, 1,857 ಮತಗಳು ಅಸಿಂಧುವಾಗಿವೆ. ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು 10,810 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 9,902 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ರಂಗನಾಥ್ ಅವರು 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇನ್ನು ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ಜಿ.ಎಸ್. ಹೆಬ್ಬರು ಅವರು 94 ಮತಗಳನ್ನು ಪಡೆದಿದ್ದು, ಪಕ್ಷೇತರ ಅಭ್ಯರ್ಥಿ ಉಮೇಶ್ 215 ಮತಗಳನ್ನು ಹಾಗೂ ನಾಗರಾಜು 11 ಮತಗಳನ್ನು ಪಡೆದಿದ್ದಾರೆ. ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಲಕ್ಷ್ಮಣ ಸ್ವಾಮಿ ಅವರು 24 ಮತಗಳನ್ನು ಪಡೆದಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರ ಗೆಲುವಿಗೆ ಜೆಡಿಎಸ್ ಯುವ ಘಟಕದ ನಾಯಕ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೈತ್ರಿಕೂಟದ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Leave a Reply

Your email address will not be published. Required fields are marked *