ಮುಂಗಾರು ಮುನ್ನೆಚ್ಚರಿಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ತಡೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

Spread the love

ಧಾರವಾಡ: ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಮಳೆ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಹಾಗೂ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 22 ಗ್ರಾಮಗಳಿಗೆ 27 ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಯಾವುದೇ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಅಗತ್ಯ ಉಂಟಾಗಿಲ್ಲ ಎಂದು ತಿಳಿಸಿದ್ದಾರೆ.

ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭಾ ಜಲಾಶಯದಿಂದ ಕಾಲುವೆಗಳ ಮೂಲಕ 60 ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಲಾಗಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಪೂರೈಕೆ ನಿರಂತರವಾಗಿರಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 100 ವಾರ್ಡ್‌ಗಳಲ್ಲಿ ಯಾವುದೇ ಟ್ಯಾಂಕರ್ ನೀರು ಪೂರೈಕೆ ನಡೆಯುತ್ತಿಲ್ಲ. ಅವುಗಳಲ್ಲಿ 80 ವಾರ್ಡ್‌ಗಳಿಗೆ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತಿದ್ದು, ಉಳಿದ 20 ವಾರ್ಡ್‌ಗಳಿಗೆ ಎರಡು ರಿಂದ ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡ್‌ಗಳಲ್ಲಿ 13 ವಾರ್ಡ್‌ಗಳಿಗೆ 24×7 ನೀರು ಪೂರೈಕೆ ವ್ಯವಸ್ಥೆ ಜಾರಿಯಲ್ಲಿದ್ದು, ಉಳಿದ ವಾರ್ಡ್‌ಗಳಿಗೆ ಎರಡು ರಿಂದ ಏಳು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ಕೆರೆಗಳಲ್ಲಿ ಸಾಕಷ್ಟು ಪ್ರಮಾಣದ ನೀರು ಸಂಗ್ರಹವಿರುವುದರಿಂದ ಸದ್ಯ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ 53 ನೀರು ಪೂರೈಕೆ ಟ್ಯಾಂಕರ್‌ಗಳು ಲಭ್ಯವಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ಯಾಂಕರ್‌ಗಳ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಅಥವಾ ಕುಂದುಕೊರತೆಗಳ ಕುರಿತು ಸಾರ್ವಜನಿಕರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ 7996666247, ಜಿಲ್ಲಾ ಪಂಚಾಯತ್ ಸಹಾಯವಾಣಿ 0836-274221 ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ 0836-2445508 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 2,33,464 ಜಾನುವಾರುಗಳಿದ್ದು, 4,75,454.81 ಟನ್ ಮೇವು ಲಭ್ಯವಿದೆ. ಇದು ಸುಮಾರು 45 ವಾರಗಳವರೆಗೆ ಸಾಕಾಗುವಷ್ಟು ಪ್ರಮಾಣವಾಗಿದ್ದು, ಯಾವುದೇ ತಾಲ್ಲೂಕಿನಲ್ಲಿ ಮೇವಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲಿನ ಪರಿಣಾಮ ಧಾರವಾಡ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, 12 ದೊಡ್ಡ ಹಾಗೂ 70 ಸಣ್ಣ ಜಾನುವಾರುಗಳು ಸಾವನ್ನಪ್ಪಿವೆ. ಈ ಎಲ್ಲಾ ಪ್ರಕರಣಗಳಿಗೆ ಜಿಲ್ಲಾಡಳಿತದಿಂದ ಪರಿಹಾರ ಧನ ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ಹಾಗೂ ರೈತರು ಗುಡುಗು-ಸಿಡಿಲಿನ ಸಂದರ್ಭ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಸಿಡಿಲು ಬೀಳುವ ಸಮಯದಲ್ಲಿ ಶವರ್ ಅಡಿಯಲ್ಲಿ ಸ್ನಾನ ಮಾಡುವುದು, ನಲ್ಲಿಯ ನೀರಿನಿಂದ ಕೈ ತೊಳೆಯುವುದು ಅಥವಾ ಪಾತ್ರೆ ತೊಳೆಯುವಂತಹ ಕಾರ್ಯಗಳನ್ನು ತಪ್ಪಿಸಬೇಕು ಎಂದು ಸೂಚಿಸಿದ್ದಾರೆ. ಮಳೆ ಮತ್ತು ಸಿಡಿಲಿನ ಸಂದರ್ಭದಲ್ಲಿ ಕಿಟಕಿ ಹಾಗೂ ಬಾಗಿಲುಗಳ ಬಳಿ ನಿಲ್ಲದೇ ಮನೆಯ ಮಧ್ಯಭಾಗದಲ್ಲಿ ಸುರಕ್ಷಿತವಾಗಿ ಇರಬೇಕು ಎಂದು ಸಲಹೆ ನೀಡಿದ್ದಾರೆ.

ಹೊಲಗಳಲ್ಲಿ ಕೆಲಸ ಮಾಡುತ್ತಿರುವವರು ಗುಡುಗು-ಮಿಂಚಿನ ಲಕ್ಷಣ ಕಂಡುಬಂದ ತಕ್ಷಣ ಸಮೀಪದ ಕಟ್ಟಡ ಅಥವಾ ಪಂಪ್‌ಹೌಸ್‌ನಲ್ಲಿ ಆಶ್ರಯ ಪಡೆಯಬೇಕು. ವಿಶಾಲವಾದ ಮೈದಾನಗಳಲ್ಲಿ ಸಿಲುಕಿದ್ದರೆ ಮರಗಳಿಂದ ದೂರವಿದ್ದು ತಗ್ಗು ಪ್ರದೇಶದಲ್ಲಿ ಕುಳಿತುಕೊಂಡು ತಲೆ ಮತ್ತು ಕಿವಿಗಳನ್ನು ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೆರೆ, ನದಿ ಅಥವಾ ನೀರಿನ ಪ್ರದೇಶಗಳಲ್ಲಿ ಇದ್ದರೆ ತಕ್ಷಣ ಹೊರಬರಬೇಕು. ವಿದ್ಯುತ್ ಕಂಬಗಳು, ಮೊಬೈಲ್ ಟವರ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ತಂತಿಬೇಲಿಗಳ ಸಮೀಪ ನಿಲ್ಲಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುವವರು ವಾಹನದ ಗಾಜುಗಳನ್ನು ಮುಚ್ಚಿಕೊಂಡು ಸಾಧ್ಯವಾದಷ್ಟು ವಾಹನದ ಲೋಹದ ಭಾಗಗಳನ್ನು ಸ್ಪರ್ಶಿಸದೆ ಕುಳಿತುಕೊಳ್ಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಜೊತೆಗೆ ಹಸು, ಕುರಿ, ನಾಯಿಗಳು ಸೇರಿದಂತೆ ಸಾಕುಪ್ರಾಣಿಗಳನ್ನು ಮರಗಳಿಗೆ ಕಟ್ಟದೇ ಸುರಕ್ಷಿತ ಶೆಡ್ ಅಥವಾ ಮನೆಯೊಳಗೆ ಇರಿಸುವ ಮೂಲಕ ಅವುಗಳನ್ನು ರಕ್ಷಿಸಲು ಸಾರ್ವಜನಿಕರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *