​ಪ್ರಾಂತೀಯ ಅಸಮಾನತೆ ನಿವಾರಣೆಗೆ ನಮ್ಮ ಸರ್ಕಾರ ಬದ್ಧ: ಪರಿಷತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Spread the love

ಬೆಳಗಾವಿ: “ರಾಜ್ಯದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ದಕ್ಷಿಣ ಮತ್ತು ಉತ್ತರ ಕರ್ನಾಟಕದ ನಡುವಿನ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದ ಪ್ರಗತಿಗೆ ವಿಶೇಷ ಒತ್ತು ನೀಡುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಸದನದಲ್ಲಿ ನಡೆದ ಸುದೀರ್ಘ ಚರ್ಚೆಗೆ ಉತ್ತರಿಸಿದ ಅವರು, ಅಧಿವೇಶನದ ಎರಡನೇ ದಿನವೇ ಈ ವಿಷಯದ ಬಗ್ಗೆ ಚರ್ಚೆ ಆರಂಭವಾಗಿರುವುದು ಇದೇ ಮೊದಲು ಎಂದು ಹರ್ಷ ವ್ಯಕ್ತಪಡಿಸಿದರು.

​ರಾಜ್ಯದ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೂ, ಜಿಲ್ಲಾವಾರು ಆದಾಯದಲ್ಲಿ ಅಸಮಾನತೆ ಇದೆ ಎಂದು ಮುಖ್ಯಮಂತ್ರಿಗಳು ವಿಷಾದಿಸಿದರು. ಬೆಂಗಳೂರು ಹಾಲು ಒಕ್ಕೂಟದಲ್ಲಿ ಪ್ರತಿದಿನ 17 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದರೆ, ಕಲಬುರಗಿ ಒಕ್ಕೂಟದಲ್ಲಿ ಕೇವಲ 67 ಸಾವಿರ ಲೀಟರ್ ಉತ್ಪಾದನೆಯಾಗುತ್ತಿದೆ. ಇಂತಹ ಹೈನುಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳು ಉತ್ತರ ಭಾಗದಲ್ಲಿ ಹೆಚ್ಚಾದಾಗ ಮಾತ್ರ ವಲಸೆ ಕಡಿಮೆಯಾಗಿ ಜನರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯ. ನಮ್ಮ ಗ್ಯಾರಂಟಿ ಯೋಜನೆಗಳು ಜನರ ತಲಾ ಆದಾಯ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಅವರು ಪ್ರತಿಪಾದಿಸಿದರು. ಕಲ್ಯಾಣ ಕರ್ನಾಟಕಕ್ಕೆ 371ಜೆ ಅಡಿ ವಿಶೇಷ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಹಿಂದೆ ಬಿಜೆಪಿ ನಾಯಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದರು ಎಂದು ಸ್ಮರಿಸಿದ ಅವರು, ತಮ್ಮ ಸರ್ಕಾರವು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 2025-26ನೇ ಸಾಲಿನಲ್ಲಿ 5,000 ಕೋಟಿ ರೂಪಾಯಿಗಳ ಭಾರಿ ಅನುದಾನವನ್ನು ಘೋಷಿಸಿದೆ ಎಂದು ಮಾಹಿತಿ ನೀಡಿದರು.

​ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಜಲಜೀವನ್ ಮಿಷನ್ ಅಡಿ ರಾಜ್ಯಕ್ಕೆ ಬರಬೇಕಾದ 13,500 ಕೋಟಿ ರೂಪಾಯಿಗಳನ್ನು ಕೇಂದ್ರ ಬಿಡುಗಡೆ ಮಾಡಿಲ್ಲ ಮತ್ತು ಕಳಸಾ ಬಂಡೂರಿ ಯೋಜನೆಯ ವಿಷಯದಲ್ಲಿಯೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ರಾಜ್ಯದ ಪಾಲಿನ ಹಕ್ಕುಗಳಿಗಾಗಿ ಕೇಂದ್ರದ ಮೇಲೆ ಒತ್ತಡ ಹೇರುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಇದೇ ವೇಳೆ ಸರ್ಕಾರದ ಸ್ಥಿರತೆಯ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅತ್ಯಂತ ಗಟ್ಟಿಯಾಗಿದ್ದು, ಬಿಜೆಪಿಯ ಅಸ್ಥಿರಗೊಳಿಸುವ ಪ್ರಯತ್ನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ. 2028ರವರೆಗೂ ತನ್ನ ಪೂರ್ಣ ಅವಧಿಯನ್ನು ಪೂರೈಸುವುದಲ್ಲದೆ, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *