

ಮೈಸೂರು: ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಯುವನಿಧಿ ಭತ್ಯೆಯನ್ನು ನಿಲ್ಲಿಸಲಾಗುವುದು ಹೊರತು, ಕೌಶಲ್ಯ ತರಬೇತಿಗೆ ಬಂದರೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಯುವಜನರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆಯೋಜಿಸಿದ್ದ “ಬೃಹತ್ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನಿ ಮೋದಿಯವರ ವಿರುದ್ಧ ಸಿಎಂ ವಾಗ್ದಾಳಿ: ಸುಳ್ಳು ಭರವಸೆಗೆ ಕಿವಿಗೊಡಬೇಡಿ
ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ ಎಂದು ವಾಗ್ದಾಳಿ ನಡೆಸಿದ ಮುಖ್ಯಮಂತ್ರಿಗಳು, “ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷಕ್ಕೆ ಒಟ್ಟು 22 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ, ಅವರು ಮಾತು ತಪ್ಪಿದ್ದಾರೆ. ಆದರೆ ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದೆ” ಎಂದು ಹೇಳಿದರು.
58 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ನೆರವು
ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು ಉದ್ಯೋಗ ಸೃಷ್ಟಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳಗಳಿಂದ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಅನುಕೂಲ ಪಡೆದುಕೊಂಡಿದ್ದಾರೆ.
- ಈ ಪೈಕಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ.
- 22,819 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಂಕಿ-ಅಂಶಗಳನ್ನು ನೀಡಿದರು.
ಜಿಲ್ಲಾ ಮಟ್ಟದಲ್ಲಿ ನಡೆದ ಉದ್ಯೋಗ ಮೇಳಗಳಲ್ಲಿ ಒಟ್ಟು 1,20,563 ಅಭ್ಯರ್ಥಿಗಳು ಭಾಗವಹಿಸಿದ್ದು, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ. ಜೊತೆಗೆ, 48,232 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಸರ್ಕಾರಿ ಹುದ್ದೆಗಳ ಭರ್ತಿ: 28 ಸಾವಿರ ನೇಮಕಾತಿ ಪೂರ್ಣ
ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. ಅಲ್ಲದೆ, ಇನ್ನೂ 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.

