
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಮರಳು ದಂಧೆಯಲ್ಲಿ ಬಳಸುತ್ತಿದ್ದ ವಾಹನಗಳು ಮತ್ತು ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.
ವೆಂಕಟಾಪುರ ಗ್ರಾಮದ ಜಿನಗಿ ಹಳ್ಳದಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ, ಚಳ್ಳಕೆರೆ ಡಿವೈಎಸ್‌ಪಿ ಟಿ.ಬಿ. ರಾಜಣ್ಣ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿತು. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಮರಳು ದಂಧೆಯಲ್ಲಿ ತೊಡಗಿದ್ದವರು ಪರಾರಿಯಾಗಿದ್ದಾರೆ.
ದಾಳಿ ವೇಳೆ, ಅಕ್ರಮ ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಎರಡು ಟಿಪ್ಪರ್‌ಗಳು, ಒಂದು ಜೆಸಿಬಿ ಯಂತ್ರ ಮತ್ತು ಹಳ್ಳದಲ್ಲಿದ್ದ ಒಂದು ಬೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ಪರಾರಿಯಾದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

