
ಕಠ್ಮಂಡು: ಕಳೆದ ಕೆಲವು ದಿನಗಳಿಂದ ತೀವ್ರ ರಾಜಕೀಯ ಬಿಕ್ಕಟ್ಟನ್ನು ಎದುರಿಸುತ್ತಿರುವ ನೇಪಾಳದಲ್ಲಿ ಸದ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ ಅವರ ಸರ್ಕಾರದ ವಿರುದ್ಧ ಹೆಚ್ಚುತ್ತಿರುವ ಸಾರ್ವಜನಿಕ ಆಕ್ರೋಶ ಮತ್ತು ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದಿವೆ.
ಈ ಬೆಳವಣಿಗೆಗಳ ಮಧ್ಯೆ ಒಲಿ ಸರ್ಕಾರದ ಐವರು ಮಂತ್ರಿಗಳು ಸಾಮೂಹಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸರ್ಕಾರ ತೀವ್ರ ಒತ್ತಡಕ್ಕೆ ಸಿಲುಕಿದೆ.
ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿದ್ದು, ಅಧ್ಯಕ್ಷರ ನಿವಾಸಕ್ಕೂ ಹಾನಿಗೊಳಗಾಗಿದೆ. ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರ ನಿವಾಸದ ಸುತ್ತ ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ವರದಿಯಾಗಿದೆ.
ರಾಜಧಾನಿ ಕಠ್ಮಂಡುವಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸಿಗದೆ, ಅಧಿಕಾರಿಗಳು ಕಠ್ಮಂಡು ವಿಮಾನ ನಿಲ್ದಾಣವನ್ನು ಮುಚ್ಚಿದ್ದಾರೆ. ಇದರಿಂದ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಯಾನ ಸೇವೆಗಳು ಸ್ಥಗಿತಗೊಂಡಿವೆ.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿ, ಪ್ರಧಾನ ಮಂತ್ರಿ ಒಲಿ ಅವರು ದೇಶದಿಂದ ಪಲಾಯನ ಮಾಡುವ ಸಾಧ್ಯತೆ ಇದೆ ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಇಷ್ಟೇ ಅಲ್ಲದೆ, ಮಾಜಿ ಪ್ರಧಾನ ಮಂತ್ರಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರ ನಿವಾಸಕ್ಕೂ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವುದು ವರದಿಯಾಗಿದೆ.
ಈ ಘಟನೆಗಳು ನೇಪಾಳದಲ್ಲಿ ಪ್ರಸ್ತುತ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಬಿಕ್ಕಟ್ಟು ತೀವ್ರಗೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ. ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಆದರೆ ಈ ಹಿಂಸಾಚಾರ ಮತ್ತು ರಾಜಕೀಯ ಅಸ್ಥಿರತೆಯು ನೇಪಾಳದ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

