ನ. 3 ರಂದು ಹುಬ್ಬಳ್ಳಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣಮಹೋತ್ಸವ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಕೈಗೊಳ್ಳಿ- ಭುವನೇಶ ಪಾಟೀಲ ಸೂಚನೆ

Spread the love

ಧಾರವಾಡ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ ೫೦ ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ನವೆಂಬರ್ 3 ರಂದು ಆಚರಿಸಲು ನಿರ್ಧರಿಸಲಾಗಿದೆ. ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಮಾಡಿಕೊಳ್ಳಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಭುವನೇಶ ಪಾಟೀಲ ಅವರು ಸೂಚಿಸಿದರು.

​ಅವರು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣಮಹೋತ್ಸವ ಸಮಾರಂಭ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಸಮುದಾಯಗಳ ಸಹಭಾಗಿತ್ವಕ್ಕೆ ಒತ್ತು

​ಸುವರ್ಣಮಹೋತ್ಸವ ಕಾರ್ಯಕ್ರಮದ ಮೂಲಕ ಮಂಡಳಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಪರಿಸರ ಸಂರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ತಿಳುವಳಿಕೆ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಮುದಾಯಗಳನ್ನು ತೊಡಗಿಸಿಕೊಂಡು, ಸಮಗ್ರ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಾಲೂಕು ಮಟ್ಟದಲ್ಲೂ ಆಚರಣೆಗೆ ಸೂಚನೆ

​ಜಿಲ್ಲಾ ಮಟ್ಟದ ಮುಖ್ಯ ಕಾರ್ಯಕ್ರಮವನ್ನು ನವೆಂಬರ್ 3 ರಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿಯೂ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸುವರ್ಣಮಹೋತ್ಸವ ಕಾರ್ಯಕ್ರಮ ಆಯೋಜಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಾಗೃತಿಗಾಗಿ ವಿಶೇಷ ಉಪನ್ಯಾಸ ಮತ್ತು ಬೀದಿ ನಾಟಕ

​ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ ಜನಸಾಮಾನ್ಯರನ್ನು ತಲುಪಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಪರಿಸರ ಮಾಲಿನ್ಯ ಸಮಸ್ಯೆಗಳಾದ ಘನ ತ್ಯಾಜ್ಯ ನಿರ್ವಹಣೆ, ಜಲ ಮಾಲಿನ್ಯ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸಗಳು, ವಿವಿಧ ಸ್ಪರ್ಧೆಗಳು, ಬೀದಿ ನಾಟಕಗಳು ಹಾಗೂ ಮಕ್ಕಳ ಭಾಷಣಗಳನ್ನು ಆಯೋಜಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

​ಕೈಗಾರಿಕೋದ್ಯಮಿಗಳು, ಪರಿಸರವಾದಿಗಳು, ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲ ಪಾಲುದಾರರ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸುವರ್ಣಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಅಧಿಕಾರಿಗಳು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಬೇಕೆಂದು ಭುವನೇಶ ಪಾಟೀಲ ಅವರು ತಾಕೀತು ಮಾಡಿದರು.

ಸಭೆಯಲ್ಲಿ ಗಣ್ಯರ ಭಾಗಿ

​ಸಭೆಯಲ್ಲಿ ಹಿರಿಯ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಸ್ವಾಗತಿಸಿ ಸಭೆ ನಿರ್ವಹಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಕಂಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಹೋನಕೇರಿ, ಸಹಾಯಕ ಅರಣ್ಯಾಧಿಕಾರಿ ಪರಿಮಳ, ಪಿಯು ಉಪನಿರ್ದೇಶಕಿ ತೇಜಸ್ವಿನಿ ನಾರಾಯಣಕರ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಡಾ. ರೇಣುಕಾ ಅಮಲಜೇರಿ, ಪರಿಸರ ನಾಗರಿಕ ಸಮಿತಿ ಅಧ್ಯಕ್ಷ ಶಂಕರ ಕುಂಬಿ, ಎಲ್.ಆರ್. ನಾಯಕ ಸೇರಿದಂತೆ ವಿವಿಧ ತಾಲೂಕು ಪಂಚಾಯಿತಿ ಇಓಗಳು, ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು

Leave a Reply

Your email address will not be published. Required fields are marked *