ಧಾರವಾಡ, ಜ. 01: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ್ 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ ಪಶ್ಚಿಮ ಪದವೀಧರರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30, 2025 ರಂದು ಪ್ರಕಟಿಸಲಾಗಿದೆ.
ಅಂತಿಮ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳಾದ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಅವರ ವ್ಯಾಪ್ತಿಗೆ ಒಳಪಡುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ. ಇದೇ ರೀತಿ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ಇವರ www.ceokarnataka.kar.nic.in ವೆಬ್ಸೈಟ್ನಲ್ಲಿ ಹಾಗೂ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ https://rcbelagavi.karnataka.gov.in ವೆಬ್ಸೈಟ್ನಲ್ಲಿಯೂ ಈ ಅಂತಿಮ ಮತದಾರರ ಪಟ್ಟಿ ಲಭ್ಯವಿರುತ್ತದೆ.
ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 51,599 ಪುರುಷ ಮತದಾರರು ಹಾಗೂ 36,488 ಮಹಿಳಾ ಮತದಾರರು ಸೇರಿದಂತೆ ಒಟ್ಟು 88,087 ಮತದಾರರು ಇರುವುದಾಗಿ ಪ್ರಕಟಿಸಲಾಗಿದೆ.
ಅಂತಿಮ ಮತದಾರರ ಪಟ್ಟಿಯಲ್ಲಿ ತಪ್ಪಿಹೋದ ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಲು, ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕಕ್ಕೆ 10 ದಿನಗಳ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಈ ಕುರಿತು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ. ಎಂ. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

