
ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಹನೂರು ವಿಧಾನಸಭಾ ಕ್ಷೇತ್ರದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ ಆರ್. ಸಿದ್ದರಾಜು ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೇಮಕಾತಿ ಸಭೆಯಲ್ಲಿ ಸಿದ್ದರಾಜು ಅವರಿಗೆ ಅಧಿಕೃತವಾಗಿ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.
ಪಕ್ಷದ ಸಂಘಟನೆಗೆ ಆದ್ಯತೆ:
ನೇಮಕಾತಿ ಬಳಿಕ ಮಾತನಾಡಿದ ಆರ್. ಸಿದ್ದರಾಜು ಅವರು, “ಮಾಜಿ ಶಾಸಕ ಆರ್. ನರೇಂದ್ರ ಅವರ ಆಶೀರ್ವಾದ ಹಾಗೂ ಹಿರಿಯ ನಾಯಕರ ಮಾರ್ಗದರ್ಶನದಂತೆ ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಕಾಯವಾಚ ಮನಸಾ ದುಡಿಯಲಾಗುವುದು. ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು,” ಎಂದು ತಿಳಿಸಿದರು.
ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಶಾಸಕರುಗಳಾದ ಎ.ಆರ್. ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಎಂ. ಗಣೇಶ್ ಪ್ರಸಾದ್, ಮಾಜಿ ಶಾಸಕ ಆರ್. ನರೇಂದ್ರ, ಉದ್ಯಮಿ ಪೊನ್ನಾಚಿ ರಂಗಸ್ವಾಮಿ ಹಾಗೂ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಉಪಸ್ಥಿತರಿದ್ದರು. ಅಲ್ಲದೆ ಹನೂರು ಮತ್ತು ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದವರ್ಮ, ಈಶ್ವರ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಂದ್ರು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ವರದಿ: ಕಾರ್ತಿಕ್ ಗೌಡ, ಹನೂರು

