
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ಬೀದರ್, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ಸಾಧಾರಣದಿಂದ ಧಾರಾಕಾರ ಮಳೆ ಸುರಿದಿದೆ. ಹಲವೆಡೆ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆದಿದ್ದರೂ ಸಾರಿಗೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಶಿವಮೊಗ್ಗ ನಗರದ ಹೊರವಲಯದ ಗೋಪಿಶೆಟ್ಟಿ ಕೊಪ್ಪದಲ್ಲಿ ಗುಡುಗು ಮಿಂಚಿನ ಆರ್ಭಟಕ್ಕೆ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ತೀವ್ರತೆಗೆ ತೆಂಗಿನ ಗರಿಗಳು ಸಂಪೂರ್ಣ ಹೊತ್ತಿ ಉರಿದಿದ್ದು, ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದರು. ಇನ್ನು ಗಡಿ ಜಿಲ್ಲೆ ಬೀದರ್‌ನಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರಿ ಮಳೆಗೆ ರಸ್ತೆಗಳು ನದಿಗಳಂತಾಗಿವೆ. ಔರಾದ್, ಕಮಲನಗರ, ಭಾಲ್ಕಿ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಯಿತು.

ಬೆಳಗಾವಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ ಚರಂಡಿಗಳು ಬ್ಲಾಕ್ ಆಗಿದ್ದರಿಂದ ಮಳೆ ನೀರು ರಸ್ತೆಗಳ ಮೇಲೆಯೇ ಹರಿದು ಅವಾಂತರ ಸೃಷ್ಟಿಸಿದೆ. ಚರಂಡಿ ಸ್ವಚ್ಛಗೊಳಿಸದ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯದ ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಎಂಟ್ರಿಯಿಂದ ಕೃಷಿ ಚಟುವಟಿಕೆಗಳಿಗೆ ಜೀವ ಬಂದಂತಾಗಿದ್ದರೂ, ನಗರ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

