

ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ **’ಬಸವ ಸಂಸ್ಕೃತಿ ಅಭಿಯಾನ-2025’**ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ನಮ್ಮ ಮೆಟ್ರೋ’ಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಘೋಷಿಸಿದರು.
ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ‘ಬಸವ ಮೆಟ್ರೋ’ ಎಂದು ಘೋಷಿಸಿ ಬಿಡುತ್ತಿದ್ದೆ. ಈ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ,” ಎಂದು ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ಈ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿಧ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ, ಸನ್ಮಾನಿಸಲಾಯಿತು. ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಸವ ತತ್ವ ಶಾಶ್ವತ; ಶೂದ್ರರು ಒಂದಾಗಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಬಸವಣ್ಣನವರ ತತ್ವ ಮತ್ತು ಸಂವಿಧಾನದ ಆಶಯಗಳ ಕುರಿತು ಪ್ರಮುಖವಾಗಿ ಮಾತನಾಡಿದರು.
”ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣುತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು, ನಾನೂ ಇದನ್ನು ಪಾಲಿಸುತ್ತೇನೆ,” ಎಂದು ಸಿದ್ದರಾಮಯ್ಯ ಹೇಳಿದರು.
ಸಮಾಜದಲ್ಲಿನ ಜಾತಿ ವ್ಯವಸ್ಥೆ ಕುರಿತು ಪ್ರಸ್ತಾಪಿಸಿದ ಅವರು, “ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುರ್ವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು,” ಎಂದು ಶೂದ್ರ ಸಮುದಾಯಕ್ಕೆ ಕರೆ ನೀಡಿದರು.
ಬಸವಣ್ಣನವರ ಆಶಯಗಳೇ ನಮ್ಮ ಸರ್ಕಾರದ ಭಾಗ್ಯಗಳು
ತಾವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವನ್ನು ನೆನಪಿಸಿಕೊಂಡ ಸಿದ್ದರಾಮಯ್ಯ, “ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು, ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ,” ಎಂದರು.
ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯಗೊಳಿಸಿರುವುದರ ಹಿಂದೆ ಇದೇ ಕಾರಣವಿದೆ ಎಂದು ಅವರು ವಿವರಿಸಿದರು. ಅಲ್ಲದೆ, ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಅವರಿಗೆ ಗೌರವ ಸೂಚಿಸಿದೆ ಎಂದು ತಿಳಿಸಿದರು.
”ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ,” ಎಂದು ಪ್ರತಿಪಾದಿಸಿದರು. ತಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿರುವುದನ್ನೂ ಪ್ರಸ್ತಾಪಿಸಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯವಾದರೆ, ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದು ಅವರು ನುಡಿದರು.
”ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ,” ಎಂದು ಅವರು ಬಸವ ಅನುಯಾಯಿಗಳಿಗೆ ಕಿವಿಮಾತು ಹೇಳಿದರು.
ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ
ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆಯ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭದಲ್ಲಿ ಭರವಸೆ ನೀಡಿದರು.

