
ಧಾರವಾಡ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು 26,954 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 12,665 ಪುರುಷ ಹಾಗೂ 14,289 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ವಿಭಾಗವಾರು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ 13,169 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಾಣಿಜ್ಯ ವಿಭಾಗದಲ್ಲಿ 7,178 ಹಾಗೂ ಕಲಾ ವಿಭಾಗದಲ್ಲಿ 6,607 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಎಂದರು. ಜಿಲ್ಲೆಯ ಒಟ್ಟು 43 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಧಾರವಾಡ ನಗರದಲ್ಲಿ 16 ಹಾಗೂ ಹುಬ್ಬಳ್ಳಿ ನಗರದಲ್ಲಿ 18 ಕೇಂದ್ರಗಳನ್ನು ಗುರುತಿಸಲಾಗಿದೆ. ಉಳಿದಂತೆ ಅಳ್ನಾವರ, ಕಲಘಟಗಿ, ಕುಂದಗೋಳ, ನವಲಗುಂದ ಮತ್ತು ಅಣ್ಣಿಗೇರಿಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಪರೀಕ್ಷೆಯ ಪಾವಿತ್ರ್ಯತೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಸಮಯದಲ್ಲಿ ಸಮೀಪದ ಜರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಮತ್ತು ಕಂಪ್ಯೂಟರ್ ಕೇಂದ್ರಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ನಕಲು ತಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಜಾಗೃತ ದಳಗಳನ್ನು (ಸ್ಕ್ವಾಡ್) ನೇಮಿಸಲಾಗಿದ್ದು, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವೆಬ್‌ಕಾಸ್ಟಿಂಗ್ ಮೂಲಕ ನಿರಂತರ ನಿಗಾ ವಹಿಸಲಾಗುವುದು.
ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ಆಸನ ವ್ಯವಸ್ಥೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಭದ್ರತೆಯ ದೃಷ್ಟಿಯಿಂದ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ಹಾಗೂ ಶಸ್ತ್ರಸಜ್ಜಿತ ಪೊಲೀಸ್ ಬೆಂಗಾವಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯಾಧಿಕಾರಿಯನ್ನು ಹೊರತುಪಡಿಸಿ ಉಳಿದ ಯಾವುದೇ ಸಿಬ್ಬಂದಿ ಅಥವಾ ಉಪನ್ಯಾಸಕರು ಮೊಬೈಲ್ ಫೋನ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ ಅವರು ಮಾತನಾಡಿ, ಪರೀಕ್ಷಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಈಗಾಗಲೇ ಕಾಲೇಜುಗಳ ಮೂಲಕ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ತೇಜಸ್ವಿನಿ ನಾರಾಯಣಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

