ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್‌; ಜಾಮೀನು ಮಂಜೂರು

Spread the love

​ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಗಳು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠವು ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿ ಅಂತಿಮವಾಗಿ ಜಾಮೀನು ನೀಡುವ ಆದೇಶ ಹೊರಡಿಸಿತು. ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಫ್ರಾ ಅವರು ವಾದ ಮಂಡಿಸಿ, ಪ್ರಕರಣದ ಬಹುತೇಕ ಸಾಕ್ಷ್ಯಗಳ ವಿಚಾರಣೆ ಈಗಾಗಲೇ ಪೂರ್ಣಗೊಂಡಿರುವುದರಿಂದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಅಥವಾ ಸಾಕ್ಷ್ಯ ನಾಶಪಡಿಸಲು ಸಾಧ್ಯವಿಲ್ಲ ಎಂದು ಪೀಠದ ಗಮನಕ್ಕೆ ತಂದರು. ಅಲ್ಲದೆ, ಪ್ರಕರಣದ ಇತರ ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿರುವುದನ್ನು ಅವರು ನ್ಯಾಯಾಲಯದ ಮುಂದೆ ಪ್ರಸ್ತಾಪಿಸಿದರು.

​ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ವಿನಯ್ ಕುಲಕರ್ಣಿ ಅವರು ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಆತಂಕವಿದೆ ಎಂದು ವಾದಿಸಿದರು. ಆದರೆ, ವಿಚಾರಣೆಯು ಅಂತಿಮ ಹಂತದಲ್ಲಿ ಇರುವುದರಿಂದ ಜಾಮೀನು ನೀಡಬಹುದು ಎಂದು ಅಭಿಪ್ರಾಯಪಟ್ಟ ಸುಪ್ರೀಂಕೋರ್ಟ್, ಮುಂದಿನ ಎರಡು ತಿಂಗಳ ಒಳಗಾಗಿ ಈ ಕೊಲೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

​2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿ ಯೋಗೀಶ್ ಗೌಡ ಅವರನ್ನು ಹಂತಕರು ಜಿಮ್‌ನಲ್ಲಿ ಹತ್ಯೆ ಮಾಡಿದ್ದರು. ಆರಂಭದಲ್ಲಿ ಆರು ಜನ ಆರೋಪಿಗಳು ಪೊಲೀಸರಿಗೆ ಶರಣಾಗಿ ಹಾದಿ ತಪ್ಪಿಸುವ ಪ್ರಯತ್ನ ಮಾಡಿದ್ದರೂ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಯಿತು. ತನಿಖೆ ನಡೆಸಿದ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ ತಂಡ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತಾದರೂ, ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ 2025ರ ಜೂನ್ 13ರಂದು ಅವರ ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಇದೀಗ ಪ್ರಕರಣ ಮುಕ್ತಾಯ ಹಂತದಲ್ಲಿರುವಾಗಲೇ ಅವರಿಗೆ ಮತ್ತೆ ಜಾಮೀನು ದೊರೆತಿದೆ.

Leave a Reply

Your email address will not be published. Required fields are marked *