
ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಚಾಮರಾಜನಗರ ಜಿಲ್ಲಾ ಸಂಯೋಜಕರನ್ನಾಗಿ ಶಿವಕುಮಾರ್ ಎಮ್.ಎಸ್. ದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಯಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಮಧುಸೂದನ್ ಅವರು ಶಿವಕುಮಾರ್ ಅವರಿಗೆ ಅಧಿಕೃತ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದರು.
ನೇಮಕಾತಿ ಆದೇಶ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಎಮ್.ಎಸ್. ದೊಡ್ಡಿ, “ಮಾಜಿ ಶಾಸಕ ಆರ್. ನರೇಂದ್ರ ಅವರ ಆಶೀರ್ವಾದ ಹಾಗೂ ಹಿರಿಯ ನಾಯಕರ ಸಹಕಾರದಿಂದ ನನಗೆ ಈ ಜವಾಬ್ದಾರಿ ದೊರೆತಿದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧನಾಗಿ, ಕಾಯಾ ವಾಚಾ ಮನಸಾ ದುಡಿಯುತ್ತೇನೆ. ನಮ್ಮ ನಾಯಕರಾದ ಆರ್. ನರೇಂದ್ರ ಹಾಗೂ ಉದ್ಯಮಿ ಪೊನ್ನಾಚಿ ರಂಗಸ್ವಾಮಿ ಅವರ ಕೈ ಬಲಪಡಿಸಲು ಮತ್ತು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು,” ಎಂದರು.
ಮುಂದುವರೆದು ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕರು ನನ್ನ ಕಾರ್ಯವೈಖರಿ ಮೆಚ್ಚಿ ನೀಡಿರುವ ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಎಲ್ಲರ ಸಹಕಾರ ಪಡೆದು ಸರ್ಕಾರದ ಸಾಧನೆ ಮತ್ತು ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಸಿ. ಪುಟ್ಟರಂಗಶೆಟ್ಟಿ, ಎಚ್.ಎಂ. ಗಣೇಶ್ ಪ್ರಸಾದ್, ಮಾಜಿ ಶಾಸಕ ಆರ್. ನರೇಂದ್ರ, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಈಶ್ವರ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

