
ಹನೂರು: ವಿದ್ಯಾರ್ಥಿಗಳು ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು.
ಪಟ್ಟಣದ ಹೊರವಲಯದಲ್ಲಿರುವ ಜಿ.ವಿ. ಗೌಡ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿದ್ದು, ಕೇವಲ ಪದವಿ ಪಡೆದರೆ ಸಾಲದು. ತಾಂತ್ರಿಕ ಜ್ಞಾನ, ಸಾಮಾನ್ಯ ಜ್ಞಾನ ಹಾಗೂ ವೈಯಕ್ತಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಅದನ್ನು ಸಾಧನೆಯ ಹಾದಿಗೆ ಬಳಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾವು ವಿದ್ಯಾರ್ಥಿಯಾಗಿದ್ದಾಗ ವೇದಿಕೆಯ ಮೇಲೆ ಮಾತನಾಡಲು ಹಿಂಜರಿಯುತ್ತಿದ್ದೆ. ಆದರೆ, ಕಾಲಕ್ರಮೇಣ ದೊರೆತ ಅನುಭವ ಆತ್ಮವಿಶ್ವಾಸವನ್ನು ಬೆಳೆಸಿತು ಎಂದು ತಮ್ಮ ಅನುಭವ ಹಂಚಿಕೊಂಡರು. ಆದ್ದರಿಂದ ವಿದ್ಯಾರ್ಥಿಗಳು ಸಂಕೋಚವನ್ನು ಬದಿಗಿಟ್ಟು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪೋಷಕರು ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ತ್ಯಾಗ ಮಾಡುತ್ತಿದ್ದು, ಅವರ ಶ್ರಮವನ್ನು ಅರ್ಥಮಾಡಿಕೊಂಡು ಅವರಿಗೆ ಹೆಮ್ಮೆ ತರುವ ರೀತಿಯಲ್ಲಿ ಬದುಕಬೇಕು. ಪ್ರತಿನಿತ್ಯ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಪ್ರಚಲಿತ ವಿದ್ಯಮಾನಗಳ ಅರಿವೂ ಹೆಚ್ಚುತ್ತದೆ ಎಂದು ಹೇಳಿದರು.

ಹನೂರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಬೆಂಗಳೂರಿಗೆ ಹತ್ತಿರದಲ್ಲಿದ್ದರೂ ಹನೂರು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ಒಂದು ವರ್ಷದೊಳಗೆ ರಸ್ತೆ, ಬಸ್ ಡಿಪೋ, ಪ್ರಜಾಸೌಧ, ತಾಲೂಕು ಪಂಚಾಯಿತಿ ಕಟ್ಟಡ ಹಾಗೂ ಆಸ್ಪತ್ರೆ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗುವುದು ಎಂದು ಭರವಸೆ ನೀಡಿದರು.

