ಧಾರವಾಡ: ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳ ಪ್ರಥಮ ಮೇಲ್ಮನವಿ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗಾಗಿ ಮಾಹಿತಿ ಹಕ್ಕು ಅಧಿನಿಯಮದ ಕುರಿತು ಜಾಗೃತಿ ಮತ್ತು ಸಂವಾದಾತ್ಮಕ ತರಬೇತಿ ಕಾರ್ಯಾಗಾರವನ್ನು ಜನವರಿ 31 ರಂದು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಮಾಹಿತಿ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಈ ಮಹತ್ವದ ಕಾರ್ಯಕ್ರಮ ನಡೆಯಲಿದ್ದು, ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟಿ, ರಾಜಶೇಖರ ಎಸ್. ಹಾಗೂ ನಾರಾಯಣ ಚನ್ನಾಳ್ ಅವರು ಉಪಸ್ಥಿತರಿದ್ದು, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ, ಆರೋಗ್ಯ, ನಗರಾಭಿವೃದ್ಧಿ, ಇಂಧನ, ಲೋಕೋಪಯೋಗಿ, ಜಲಸಂಪನ್ಮೂಲ, ವಾಣಿಜ್ಯ ಮತ್ತು ಕೈಗಾರಿಕೆ, ಗೃಹ ಹಾಗೂ ಕೃಷಿ ಸೇರಿದಂತೆ ಜಿಲ್ಲೆಯ ಬಹುತೇಕ ಇಲಾಖೆಗಳ ಅಧಿಕಾರಿಗಳು ಈ ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಆರ್‌ಟಿಐ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಮಾಹಿತಿ ಹಕ್ಕು ಅರ್ಜಿಗಳು ಮತ್ತು ಮೇಲ್ಮನವಿಗಳ ಸ್ವೀಕೃತಿ ಹಾಗೂ ಬಾಕಿ ಇರುವ ಪ್ರಕರಣಗಳ ಕುರಿತು ನಿಖರವಾದ ಅಂಕಿ-ಅಂಶಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಭುವನೇಶ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

