
ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಧಾರವಾಡದಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ನಡೆದ ಈ ಮಹತ್ವದ ಸಂವಾದದಲ್ಲಿ ಸುಮಾರು 5,000ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಪಾಲ್ಗೊಂಡು ಮಾರ್ಗದರ್ಶನ ಪಡೆದರು.
ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು, ವಿದ್ಯಾರ್ಥಿಗಳು ತಮ್ಮ ಮುಂದೆ ಒದಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. “ಪ್ರಾಮಾಣಿಕ ಮತ್ತು ನಿರಂತರ ಪರಿಶ್ರಮದಿಂದ ಯಾವುದೇ ಗುರಿಯನ್ನು ಸಾಧಿಸಲು ಸಾಧ್ಯವಿದೆ. ಸ್ಪರ್ಧಾರ್ಥಿಗಳು ಎಲ್ಲ ರೀತಿಯ ಗೊಂದಲಗಳಿಂದ ಹೊರಬಂದು ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು. ಆಗ ಮಾತ್ರ ಅವರು ಅಂದುಕೊಂಡ ಗುರಿ ತಲುಪಲು ಸಾಧ್ಯವಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಗಹನವಾದ ಚರ್ಚೆ ನಡೆದ ಈ ಕಾರ್ಯಾಗಾರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಭಾಗವಹಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಅಪಾರ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಪಾಲ್ಗೊಂಡಿದ್ದು, ಯಶಸ್ವಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ಮಾಹಿತಿ ಪಡೆದುಕೊಂಡರು.

