
ಧಾರವಾಡ: ಜಿಲ್ಲೆಯಲ್ಲಿ 2026ರ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಜರುಗಲಿದ್ದು, ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯ ಒಟ್ಟು 105 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದರಲ್ಲಿ 26,171 ಹೊಸ ವಿದ್ಯಾರ್ಥಿಗಳು, 960 ಬಾಹ್ಯ ಅಭ್ಯರ್ಥಿಗಳು ಹಾಗೂ 2,437 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ ನಡೆಯಲಿವೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಾಗೃತ ದಳದ ಅಧಿಕಾರಿಗಳಾಗಿ ಉಪನಿರ್ದೇಶಕರನ್ನು ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೆ, ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ವೆಬ್ಕಾಸ್ಟಿಂಗ್ ಮೂಲಕ ಪರೀಕ್ಷಾ ಪ್ರಕ್ರಿಯೆಯನ್ನು ನೇರವಾಗಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ಪರೀಕ್ಷಾ ದಿನಗಳಂದು ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಪಾಲಕರು ಹಾಗೂ ಸ್ಥಳೀಯ ನಿರೀಕ್ಷಕರನ್ನು ಮಂಡಳಿಯ ನಿಯಮದಂತೆ ನೇಮಕ ಮಾಡಲಾಗಿದೆ. ಪರೀಕ್ಷೆಯನ್ನು ಶಾಂತಿಯುತವಾಗಿ ಹಾಗೂ ಯಾವುದೇ ಗೊಂದಲಗಳಿಲ್ಲದೆ ನಡೆಸಲು ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

