ರಾಜ್ಯೋತ್ಸವ ಮೆರವಣಿಗೆ ವೇಳೆ ಚಾಕು ಇರಿತ; ಬೆಳಗಾವಿಯಲ್ಲಿ ಐವರಿಗೆ ಗಾಯ

Spread the love

📰 ರಾಜ್ಯೋತ್ಸವ ಮೆರವಣಿಗೆ ವೇಳೆ ಚಾಕು ಇರಿತ; ಬೆಳಗಾವಿಯಲ್ಲಿ ಐವರಿಗೆ ಗಾಯ

ಬೆಳಗಾವಿ:
ಕನ್ನಡ ರಾಜ್ಯೋತ್ಸವದ ವಿಜೃಂಭಣೆಯ ಮೆರವಣಿಗೆ ನಡೆಯುತ್ತಿದ್ದ ವೇಳೆಯಲ್ಲೇ ಬೆಳಗಾವಿ ನಗರದ ಸದಾಶಿವ ನಗರ ಪ್ರದೇಶದಲ್ಲಿ ಅಹಿತಕರ ಘಟನೆ ನಡೆದಿದ್ದು, ದುಷ್ಕರ್ಮಿಗಳ ತಂಡವೊಂದು ಐವರಿಗೆ ಚಾಕು ಇರಿದು ಪರಾರಿಯಾಗಿದೆ. ಈ ಘಟನೆಯು ಶನಿವಾರ (ನವೆಂಬರ್ 1, 2025) ರಾತ್ರಿ 9 ಗಂಟೆ ಸುಮಾರಿಗೆ ಚೆನ್ನಮ್ಮ ವೃತ್ತದ ಸಮೀಪದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ನಡೆದಿದೆ ಎಂದು ವರದಿಯಾಗಿದೆ.

ರಾಜ್ಯೋತ್ಸವದ ಅಂಗವಾಗಿ ನಡೆದ ರೂಪಕಗಳ ಮೆರವಣಿಗೆಯಲ್ಲಿ ಭಾಗವಹಿಸಿ, ಕನ್ನಡ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಯುವಕರ ಗುಂಪಿನ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ, ಯದ್ವಾತದ್ವಾ ಚಾಕು ಇರಿದು ಪರಾರಿಯಾಗಿದ್ದಾರೆ. ಈ ಘಟನೆಯಿಂದಾಗಿ ಮೆರವಣಿಗೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ (ಬಿಮ್ಸ್) ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬ್ಳೆ, ಲೋಕೇಶ್ ಬೆಟಗೇರಿ, ಮಹೇಶ್ ವಿನಾಯಕ (ಸಂಕದ್) ಮತ್ತು ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನೆಹರು ನಗರ ನಿವಾಸಿಗಳು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದರು. ಈ ದಾಳಿಯ ಹಿಂದೆ ಹೊರಗಿನವರ ಕೈವಾಡ ಇರುವ ಸಾಧ್ಯತೆಯನ್ನು ಪೊಲೀಸರು ಶಂಕಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಸ್ಥಳೀಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ದುಷ್ಕರ್ಮಿಗಳ ಬಂಧನಕ್ಕಾಗಿ ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *