ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಅತ್ಯಾಧುನಿಕ ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್: ಸಂಸದ ಈ. ತುಕಾರಾಮ್ ಅವರಿಂದ ಉದ್ಘಾಟನೆ

Spread the love

ಬಳ್ಳಾರಿ: ನ 28: ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್ ಅನುದಾನದಡಿ ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್ ಅನ್ನು ಲೋಕಸಭಾ ಸಂಸದ ಈ. ತುಕಾರಾಮ್ ಅವರು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಮ್ಮ ದೇಹವೇ ದೇಗುಲವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು” ಎಂದು ಕರೆ ನೀಡಿದರು.

​ಪ್ರಸ್ತುತದ ಜೀವನಶೈಲಿಯಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಪೌಷ್ಟಿಕ ಆಹಾರ ಸೇವನೆಯ ಜೊತೆಗೆ ನಿಯಮಿತ ವ್ಯಾಯಾಮ ಮಾಡುತ್ತಾ, ಮನಸ್ಸನ್ನು ಆರೋಗ್ಯವಾಗಿಟ್ಟುಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

​ಸಂಸದರು ಸಿಎಸ್‌ಆರ್ ಅನುದಾನದ ಮಹತ್ವವನ್ನು ವಿವರಿಸುತ್ತಾ, 2014 ರಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿಗೆ ತಂದ ಕಾಯ್ದೆಯು, ಲಾಭ ಪಡೆಯುತ್ತಿದ್ದ ಉದ್ಯಮಗಳಿಂದ ಶೇ.02 ರಷ್ಟು ಸಿಎಸ್‌ಆರ್ ಅನುದಾನವನ್ನು ಶೈಕ್ಷಣಿಕ ಅಭಿವೃದ್ಧಿ, ಆರೋಗ್ಯ, ಮತ್ತು ಕೌಶಲಾಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದರಡಿ ಈಗಾಗಲೇ ಸಾಕಷ್ಟು ಅನುದಾನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗುತ್ತಿದೆ ಎಂದು ಹೇಳಿದರು.

​💵 ಬಿಪಿಎಲ್ ಕಾರ್ಡುದಾರರಿಗೆ ₹1150ಕ್ಕೆ ಸೇವೆ ಲಭ್ಯ

​ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಅತ್ಯುತ್ತಮ ಗುಣಮಟ್ಟದ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕಾರ್ಯನಿರ್ವಹಿಸಲಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ ಕೇವಲ ₹1150 ದರದಲ್ಲಿ ಸ್ಕ್ಯಾನಿಂಗ್ ಸೇವೆ ದೊರೆಯಲಿದೆ. ಈ ಕುರಿತು ಎಲ್ಲಾ ತಾಲ್ಲೂಕು ಮಟ್ಟದಲ್ಲಿಯೂ ಸಹ ಹೆಚ್ಚಿನ ಪ್ರಚಾರ ನೀಡಬೇಕು ಎಂದು ತಿಳಿಸಿದರು.

​ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾಡಳಿತದ ಸಹಕಾರ ಮತ್ತು ಸಂಸದರ ಇಚ್ಛಾಶಕ್ತಿಯಿಂದ ಎನ್‌ಎಂಡಿಸಿ ಯ ಸಿಎಸ್‌ಆರ್ ಅನುದಾನದಡಿ ಈ ಅತ್ಯಾಧುನಿಕ ತಂತ್ರಜ್ಞಾನದ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಲಭಿಸಿದೆ. ಮಾನವ ದೇಹದೊಳಗೆ ಮೂಳೆ ಮತ್ತು ನರಗಳಿಗೆ ಸಂಬಂಧಿಸಿದಂತೆ ಸ್ಕ್ಯಾನ್ ಮಾಡಲು ಇದು ಅನುಕೂಲವಾಗಲಿದ್ದು, ಇದು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳುವುದರಿಂದ ಪ್ರತಿದಿನ ನಿಯಮಿತವಾಗಿ ಸ್ಕ್ಯಾನಿಂಗ್ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಗುಣಮಟ್ಟದ ಸ್ಕ್ಯಾನಿಂಗ್ ಕವರ್‌ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಈ ವೇಳೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಎನ್‌ಎಂಡಿಸಿ ಯ ಜನರಲ್ ಮ್ಯಾನೇಜರ್ ಚಟರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

​ನಂತರ ಸಂಸದ ಈ. ತುಕಾರಾಮ್ ಅವರು ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ ₹25 ಲಕ್ಷ ಅನುದಾನದಲ್ಲಿ ನಿರ್ಮಿಸಿರುವ ಆದರ್ಶ ಪಾರ್ಕ್‌ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *