ಕುಡಿಯುವ ನೀರು, ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

Spread the love

ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಬರ ಪರಿಸ್ಥಿತಿ ಹಾಗೂ ಅತಿವೃಷ್ಟಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಹಾಗೂ ಪ್ರಕೃತಿ ವಿಕೋಪ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು. ಕೊಳವೆಬಾವಿ ಸೇರಿದಂತೆ ಪರ್ಯಾಯ ವ್ಯವಸ್ಥೆಗಳ ಮೂಲಕ ಕುಡಿಯುವ ನೀರು ಪೂರೈಸಬೇಕು. ಮಳೆ ಬರದಿದ್ದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದ್ದು, ಜಾನುವಾರುಗಳಿಗೆ ಗೋಶಾಲೆ ತೆರೆಯುವ ಪರಿಸ್ಥಿತಿ ನಿರ್ಮಾಣವಾಗಬಹುದು. ಇದಕ್ಕಾಗಿ ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪರ್ಯಾಯ ವ್ಯವಸ್ಥೆಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು. ಅಭಾವ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ವಾಸ್ತವ ಸ್ಥಿತಿಯ ಮಾಹಿತಿಯನ್ನು ಒದಗಿಸಬೇಕು. ಅಪೂರ್ಣ ಅಥವಾ ನಿಖರ ಮಾಹಿತಿಯ ಕೊರತೆಯಿಂದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಹೀಗಾಗಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು. ಈಗಾಗಲೇ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಯೋಜನೆಗಳನ್ನು ಪರಿಶೀಲಿಸಬೇಕು. ಕೆಲವೆಡೆ ಪೈಪ್‌ಲೈನ್‌ಗಳನ್ನು ಅವೈಜ್ಞಾನಿಕವಾಗಿ ಅಳವಡಿಸಲಾಗಿದ್ದು, ಕೆಲವು ಕಾಮಗಾರಿಗಳು ಸ್ಥಗಿತಗೊಂಡಿವೆ. ಇಂತಹ ಕಾಮಗಾರಿಗಳ ನೈಜ ಚಿತ್ರಣವನ್ನು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸಿದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಾಗುವುದು. ಆಯಾ ತಾಲೂಕಿನಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲಾಗುವುದು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಬೆಳೆ, ಕುಡಿಯುವ ನೀರು, ಮೇವು ಸೇರಿದಂತೆ ಅಭಾವ ಪೀಡಿತ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ಒದಗಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಿದರೆ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯುತ್ತದೆ. ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಸಾಗಲು ಶಿಷ್ಟಾಚಾರ ಪಾಲನೆ ಮಾಡಿ, ಯಾವುದೇ ಲೋಪಕ್ಕೆ ಅವಕಾಶ ನೀಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಂಡರೆ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಬಹುದು. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುತ್ತದೆ. ಆದ್ದರಿಂದ ಇಂತಹ ಪ್ರಮುಖ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾಹಿತಿ ನೀಡಿ, ಚಾಮರಾಜನಗರ ತಾಲೂಕಿನಲ್ಲಿ ಮುಂಬರುವ ತಿಂಗಳಲ್ಲಿ 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 42 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದರು. ಗುಂಡ್ಲುಪೇಟೆ ತಾಲೂಕಿನ 6 ಗ್ರಾಮ ಪಂಚಾಯಿತಿಗಳ 7 ಗ್ರಾಮಗಳು ಹಾಗೂ ಯಳಂದೂರು ತಾಲೂಕಿನ 7 ಗ್ರಾಮ ಪಂಚಾಯಿತಿಗಳ 9 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕೊಳ್ಳೇಗಾಲ ತಾಲೂಕಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ನಿರೀಕ್ಷಿಸಲಾಗಿಲ್ಲ. ಹನೂರು ತಾಲೂಕಿನಲ್ಲಿ ಈಗಾಗಲೇ 16 ಗ್ರಾಮ ಪಂಚಾಯಿತಿಗಳ 54 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, 9 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌, 43 ಗ್ರಾಮಗಳಿಗೆ ಟ್ಯಾಂಕರ್ ಹಾಗೂ 2 ಗ್ರಾಮಗಳಿಗೆ ತೆರೆದ ಬಾವಿ ಮತ್ತು ಕೈಪಂಪ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 44 ಗ್ರಾಮ ಪಂಚಾಯಿತಿಗಳ 84 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ 26 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ, ಟ್ಯಾಂಕರ್ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *