​ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಆಡಳಿತಾಧಿಕಾರಿ ಧನುಷ್ ಸೂಚನೆ

Spread the love

ಮಳವಳ್ಳಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನುಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಬೋರ್‌ವೆಲ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗಬಾರದು ಎಂದು ಅವರು ತಾಕೀತು ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ರಂಗಸ್ವಾಮಿ, ತಾಲ್ಲೂಕಿನ ಐದು ಕಡೆಗಳಲ್ಲಿ ನೀರಿನ ಸಮಸ್ಯೆ ಕಂಡುಬಂದಿದ್ದು, ಅದನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಮಾತನಾಡಿ, ತಮ್ಮ ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಹೆಚ್ಚುವರಿ ಕೊಠಡಿ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಆಡಳಿತಾಧಿಕಾರಿ ಧನುಷ್, ಜಿಲ್ಲಾ ಪಂಚಾಯಿತಿ ಬಜೆಟ್ ವೇಳೆ ಅನುದಾನ ನೀಡುವ ಅವಕಾಶವಿದ್ದು, ಅಗತ್ಯ ಪ್ರಸ್ತಾವನೆ ಸಲ್ಲಿಸಿ ಅನುದಾನ ಪಡೆಯುವಂತೆ ಸಲಹೆ ನೀಡಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಶ್ರೀನಿವಾಸ್, ಯೋಜನಾಧಿಕಾರಿ ದೀಪು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *