
ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ ಎಸ್. ಲಾಡ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮೂರು ದಿನಗಳ ಕಾಲ ಜಿಲ್ಲೆಯ ಬರ ಪರಿಸ್ಥಿತಿ ಎದುರಿಸುತ್ತಿರುವ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದ್ದು, ಮೊದಲ ದಿನ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಾಗಿದೆ. ಗುರುವಾರ ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಆಗಸ್ಟ್ 7ರಂದು ಅಳ್ನಾವರ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಬರ ಪರಿಸ್ಥಿತಿಯ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಬೆಳೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಸರ್ವೆ ನಂಬರ್ ಆಧಾರಿತ ಸಮೀಕ್ಷೆ ಕೈಗೊಳ್ಳಲಾಗುವುದು. ಮುಂದಿನ ಜೂನ್ ತಿಂಗಳವರೆಗೆ ಬರ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಸಮರ್ಪಕ ಯೋಜನೆ ರೂಪಿಸಬೇಕು ಎಂದು ಸಚಿವರು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ ನೀಡಿ, ಜೂನ್ 1ರಿಂದ ಆಗಸ್ಟ್ 5ರವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 299.7 ಮಿ.ಮೀ. ಆಗಬೇಕಾಗಿದ್ದರೆ, ಕೇವಲ 196.2 ಮಿ.ಮೀ. ಮಳೆಯಾಗಿದ್ದು ಶೇ.35ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಎಂಟು ತಾಲೂಕುಗಳ ಪೈಕಿ ಕುಂದಗೋಳ ತಾಲೂಕಿನಲ್ಲಿ ಮಾತ್ರ ಅಧಿಕ ಮಳೆಯಾಗಿದ್ದು, ಉಳಿದ ಏಳು ತಾಲೂಕುಗಳಲ್ಲಿ ಸಾಧಾರಣ ಮಳೆ ಕೊರತೆ ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಜಿಲ್ಲೆಗೆ ಗ್ರೀನ್ ಅಲರ್ಟ್ ಘೋಷಿಸಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದರು.

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ 2.82 ಲಕ್ಷ ಹೆಕ್ಟೇರ್ ಗುರಿ ನಿಗದಿಯಾಗಿದ್ದು, ಇದುವರೆಗೆ 2.71 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದ್ದು ಶೇ.96ರಷ್ಟು ಸಾಧನೆ ಆಗಿದೆ. ತೋಟಗಾರಿಕೆ ಬೆಳೆಗಳಿಗೆ 22,854.1 ಹೆಕ್ಟೇರ್ ಗುರಿ ಇದ್ದು, 16,825.1 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿ ಶೇ.74ರಷ್ಟು ಪ್ರಗತಿ ದಾಖಲಾಗಿದೆ. ಬಿತ್ತನೆ ಬೀಜಗಳ ಪೂರೈಕೆಯಲ್ಲಿ 18,457 ಕ್ವಿಂಟಲ್ ಗುರಿಯ ಪೈಕಿ ಜಿಲ್ಲೆಗೆ 17,720 ಕ್ವಿಂಟಲ್ ಪೂರೈಕೆಯಾಗಿದ್ದು, 15,855 ಕ್ವಿಂಟಲ್ ರೈತರಿಗೆ ವಿತರಿಸಲಾಗಿದೆ. ಇನ್ನೂ 1,631 ಕ್ವಿಂಟಲ್ ಬೀಜ ದಾಸ್ತಾನು ಇರುವುದರಿಂದ ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ತಿಳಿಸಲಾಯಿತು. ರಸಗೊಬ್ಬರದ 54,648 ಮೆಟ್ರಿಕ್ ಟನ್ ಬೇಡಿಕೆಯ ಪೈಕಿ 57,240 ಮೆಟ್ರಿಕ್ ಟನ್ ಪೂರೈಕೆಯಾಗಿದ್ದು, 36,740 ಮೆಟ್ರಿಕ್ ಟನ್ ರೈತರಿಗೆ ವಿತರಿಸಲಾಗಿದೆ. ಪ್ರಸ್ತುತ 21,700 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 1,29,769 ಬೆಳೆ ವಿಮೆ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,21,258 ಹೆಕ್ಟೇರ್ ಪ್ರದೇಶದಲ್ಲಿ ನೋಂದಣಿ ಪೂರ್ಣಗೊಂಡಿದೆ. ಬರ ಮೌಲ್ಯಮಾಪನಕ್ಕಾಗಿ ‘ಕ್ರಾಪ್ ಲಾಸ್ ಗ್ರೌಂಡ್ ಟ್ರೂಥಿಂಗ್’ ಕುರಿತು ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ ತರಬೇತಿ ನೀಡಲಾಗಿದ್ದು, ಸರ್ಕಾರದಿಂದ ತಾಲೂಕುಗಳ ಪಟ್ಟಿ ಬಂದ ತಕ್ಷಣ ಜಿಲ್ಲೆಯಲ್ಲಿ ಗ್ರೌಂಡ್ ಟ್ರೂಥಿಂಗ್ ಕಾರ್ಯ ಆರಂಭಿಸಲಾಗುವುದು ಎಂದು ತಿಳಿಸಲಾಯಿತು. ಜಿಲ್ಲೆಯ ಮೂರು ತಾಲೂಕುಗಳ 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 18 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ ಮೂಲಕ ನೀರು ಪೂರೈಸುವ ಅಗತ್ಯ ಇದುವರೆಗೆ ಉಂಟಾಗಿಲ್ಲ. ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕುಗಳಲ್ಲಿ ಮಲಪ್ರಭ ಜಲಾಶಯದ ಕಾಲುವೆಗಳ ಮೂಲಕ 60 ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲಾಗಿದ್ದು, ಆಗಸ್ಟ್ ಅಂತ್ಯದವರೆಗೆ ನೀರಿನ ಲಭ್ಯತೆ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ಧಾರವಾಡ ಜಿಲ್ಲೆಯ ಐದು ಸ್ಥಳೀಯ ಸಂಸ್ಥೆಗಳ 100 ವಾರ್ಡ್ಗಳಿಗೆ ಪ್ರತಿದಿನ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ಗಳ ಪೈಕಿ 13 ವಾರ್ಡ್ಗಳಿಗೆ 24×7 ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ ವಾರ್ಡ್ಗಳಿಗೆ ಎರಡು ರಿಂದ ಆರು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯ 1,84,037 ದೊಡ್ಡ ಹಾಗೂ 1,83,524 ಸಣ್ಣ ಜಾನುವಾರುಗಳಿಗೆ ಒಟ್ಟು 3,57,380 ಟನ್ ಮೇವು ಲಭ್ಯವಿದ್ದು, ಮುಂದಿನ 43 ವಾರಗಳಿಗೆ ಸಾಕಾಗುವಷ್ಟು ದಾಸ್ತಾನು ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಏಳು ಮೇವು ಬ್ಯಾಂಕ್ಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದೆ. ಜೂನ್ 1ರಿಂದ ಜುಲೈ 29ರವರೆಗೆ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವಹಾನಿ ಸಂಭವಿಸಿಲ್ಲ. ಜುಲೈ 24ರಂದು ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದಲ್ಲಿ ದನದ ಕೊಟ್ಟಿಗೆ ಕುಸಿದು ಒಂದು ಆಕಳು ಮೃತಪಟ್ಟಿದ್ದು, ₹37,500 ಪರಿಹಾರ ವಿತರಿಸಲಾಗಿದೆ. ಮಾರ್ಚ್ ತಿಂಗಳ ಅಕಾಲಿಕ ಮಳೆಯಿಂದ ಕಲಘಟಗಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕುಗಳಲ್ಲಿ 1,022 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾದ 1,221 ರೈತರಿಗೆ ₹1.72 ಕೋಟಿ ಪರಿಹಾರವನ್ನು ಡಿಬಿಟಿ ಮೂಲಕ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

