ವಿಪತ್ತು ನಿರ್ವಹಣೆಯಲ್ಲಿ ತಂಡದ ಸಮನ್ವಯ ಮತ್ತು ಆಧುನಿಕ ಉಪಕರಣಗಳ ಬಳಕೆ ಅತ್ಯಗತ್ಯ: ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ

Spread the love

ಧಾರವಾಡ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ತಕ್ಷಣದ ಸ್ಪಂದನೆ ನೀಡಿ ಜನ-ಜಾನುವಾರುಗಳ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸಲು ವಿಪತ್ತು ನಿರ್ವಹಣಾ ಅಣುಕು ಪ್ರದರ್ಶನಗಳು ಅತ್ಯಂತ ಸಹಕಾರಿಯಾಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಅಭಿಪ್ರಾಯಪಟ್ಟರು.

​ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಚ್‌ಪಿಸಿಎಲ್ ತೈಲ ಘಟಕದಲ್ಲಿ ಶುಕ್ರವಾರ ಜಿಲ್ಲಾಡಳಿತ, ಮೆ|| ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ವಿಜಯವಾಡದ ಎನ್‌ಡಿಆರ್‌ಎಫ್ ತಂಡದ ಸಂಯೋಗದಲ್ಲಿ ಆಯೋಜಿಸಲಾಗಿದ್ದ ‘ಗ್ಯಾಸ್ ಸೋರಿಕೆ ಅವಘಡ ತಡೆಗಟ್ಟುವ ಅಣುಕು ಪ್ರದರ್ಶನ’ (On-Site Mock Exercise on CBRN) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದಾಗ ಸಂಬಂಧಿಸಿದ ಎಲ್ಲಾ ಇಲಾಖೆಗಳು ತಕ್ಷಣ ಪರಸ್ಪರ ಸಮನ್ವಯ ಸಾಧಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿರಂತರವಾಗಿ ಇಂತಹ ಪುನರ್ ಮನನ ಕಾರ್ಯಕ್ರಮ ಹಾಗೂ ತರಬೇತಿಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.

​ಅಪಘಾತ, ಟ್ಯಾಂಕರ್ ಸೋರಿಕೆ, ಅಗ್ನಿ ಅವಘಡ ಅಥವಾ ನೆರೆಯಂತಹ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ತಾಂತ್ರಿಕ ನೈಪುಣ್ಯತೆ ಮತ್ತು ಆಧುನಿಕ ಉಪಕರಣಗಳ ಜೊತೆಗೆ ಕೌಶಲ್ಯಭರಿತ ಮಾನವ ಸಂಪನ್ಮೂಲದ ಅಗತ್ಯವಿದೆ. ಈ ದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ಈಗಾಗಲೇ ಅಗ್ನಿಶಾಮಕ ಇಲಾಖೆಗೆ ಆಧುನಿಕ ಜೀವರಕ್ಷಕ ಸಾಧನ ಮತ್ತು ಸಲಕರಣೆಗಳನ್ನು ಒದಗಿಸಲಾಗಿದೆ. ಕಂದಾಯ, ಪೊಲೀಸ್, ಕೈಗಾರಿಕೆ, ಆರೋಗ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಪರಸ್ಪರ ಸಂಪರ್ಕದಲ್ಲಿದ್ದು ಕೆಲಸ ಮಾಡಿದಾಗ ಮಾತ್ರ ಹೆಚ್ಚಿನ ಅನಾಹುತಗಳನ್ನು ತಡೆಗಟ್ಟಲು ಸಾಧ್ಯ ಎಂದು ಅವರು ಕಿವಿಮಾತು ಹೇಳಿದರು.

​ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅದರಲ್ಲೂ ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಎನ್‌ಡಿಆರ್‌ಎಫ್ ಕಮಾಂಡೆಂಟ್ ಪ್ರದೀಪ್ ಕುಮಾರ್, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ರವೀಂದ್ರನಾಥ ರಾಠೋಡ ಮತ್ತು ವೆಂಕಟೇಶ ರಾಠೋಡ, ರಾಯಾಪುರ ಎಚ್‌ಪಿಸಿಎಲ್ ಮುಖ್ಯಸ್ಥ ದೇವ ಧೃವ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಹಾಯಕ ನಿರ್ದೇಶಕ ರಾಜಶೇಖರ ಕಂಟೆಪ್ಪಗೌಡರ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *