ಧಾರವಾಡದಲ್ಲಿ ಟೆನ್ನಿಸ್ ಜಯಭೇರಿ: ರಾಜ್ಯಮಟ್ಟದ ಪಂದ್ಯಾವಳಿಗೆ 300ಕ್ಕೂ ಹೆಚ್ಚು ಆಟಗಾರರ ಭಾಗಿ; ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವರ ಭರವಸೆ

Spread the love

ಧಾರವಾಡ ನ. 07: ಧಾರವಾಡದಲ್ಲಿ ಶುಕ್ರವಾರದಂದು ಡಿಡಿಎಲ್‌ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‌ನಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಧಾರವಾಡದಿಂದ ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಹೇಳಿದರು.

​ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ ಎಂದು ಸಚಿವರು ಒತ್ತಿ ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಧಾರವಾಡ ಇದೀಗ ಟೆನ್ನಿಸ್ ಕ್ರೀಡೆಯಲ್ಲಿಯೂ ಮುಂಚೂಣಿಗೆ ಬರುತ್ತಿದೆ. ಬೆಂಗಳೂರಿನ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್‌ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ. ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ಧಾರವಾಡದಲ್ಲಿ ಕ್ರೀಡಾ ವಾತಾವರಣವನ್ನು ಮತ್ತಷ್ಟು ಉತ್ತಮಗೊಳಿಸಲು ಎಲ್ಲರ ಸಹಕಾರ ಮುಖ್ಯ ಎಂದರು.

​ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ಧಾರವಾಡವು ಕ್ರೀಡೆಯ ಚುಕ್ಕಾಣಿಯನ್ನು ಹಿಡಿದಿದೆ. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿರುವುದು ಸಂತೋಷ ತಂದಿದೆ. ಧಾರವಾಡದ ಯುವಜನರು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಇದೇ ವೇಳೆ, ನಗರದ ಹೃದಯಭಾಗದಲ್ಲಿರುವ ಬ್ರಿಟಿಷರ ಕಾಲದ ಐತಿಹಾಸಿಕ ಜಿಮ್ ಖಾನಾ ಕ್ಲಬ್‌ನ ಸಮಗ್ರ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು.

​ಶಾಸಕ ಬೆಲ್ಲದ ಅವರ ಮನವಿಗೆ ಪ್ರತಿಕ್ರಿಯಿಸಿದ ಸಚಿವ ಲಾಡ್ ಅವರು, ಹುಬ್ಬಳ್ಳಿಯಲ್ಲಿ ಜಗತ್ತಿನ ಅಂತರಾಷ್ಟ್ರೀಯ ಆಟಗಳನ್ನು ಆಡಲು ಸೂಕ್ತವಾದ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ನಮ್ಮ ಭಾಗದ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಬೆಂಗಳೂರಿಗೆ ಹೋಗುವ ಅನಿವಾರ್ಯತೆ ತಪ್ಪುತ್ತದೆ ಎಂದು ಭರವಸೆ ನೀಡಿದರು.

​ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಎಫ್.ಹೆಚ್.ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹಾಗೂ ಹಿರಿಯ ಅಧಿಕಾರಿಗಳಾದ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟೆನ್ನಿಸ್ ತರಬೇತುದಾರರು, ನಿರ್ಣಾಯಕರು, ಸ್ಪರ್ಧಾಳುಗಳು ಮತ್ತು ಪಾಲಕರು ಹಾಜರಿದ್ದರು.

Leave a Reply

Your email address will not be published. Required fields are marked *