
ಬೆಂಗಳೂರು: ದೇಶದ ಅತ್ಯಂತ ಹಿರಿಯ ಶಾಸಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ (95) ಅವರು ವಯೋಸಹಜ ಅನಾರೋಗ್ಯದ ಕಾರಣ ಭಾನುವಾರ (ಡಿಸೆಂಬರ್ 14, 2025) ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಸುಮಾರು ಒಂದು ತಿಂಗಳಿನಿಂದ ಉಸಿರಾಟದ ತೊಂದರೆ ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿಗೆ ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ತೋಟಗಾರಿಕೆ ಮತ್ತು ಎಪಿಎಂಸಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು ದಶಕಗಳ ಕಾಲ ಕೆಪಿಸಿಸಿ ಖಜಾಂಚಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇವರು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಶಾಸಕರ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯವು ಸೋಮವಾರ (ಡಿ. 15) ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿದೆ ಮತ್ತು ರಜೆ ಘೋಷಿಸಿದೆ.

