
ಧಾರವಾಡ: ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆಡಳಿತಾತ್ಮಕ ಬದಲಾವಣೆಗಳಾಗಿದ್ದು, ಕುಂದಗೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳ ಆದೇಶದನ್ವಯ, ಕುಂದಗೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶ್ರೀ ಜಗದೀಶ ಎಸ್. ಕಮ್ಮಾರ ಅವರನ್ನು ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕು ಪಂಚಾಯತ್‌ನ ತೆರವಾಗಿರುವ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ನಿಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಗದೀಶ ಕಮ್ಮಾರ ಅವರನ್ನು ಮಾರ್ಚ್ 25ರಂದು ಅಧಿಕೃತವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಅವರು ಕೂಡಲೇ ನಿಯೋಜಿತ ಸ್ಥಳದಲ್ಲಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕುಂದಗೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯು ತೆರವಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಅಳ್ಳಾವರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರಶಾಂತ ತುರಕಾಣಿ ಅವರಿಗೆ ಕುಂದಗೋಳ ತಾಲ್ಲೂಕಿನ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಡಲಾಗಿದೆ. ತಮ್ಮ ಮೂಲ ಹುದ್ದೆಯ ಜವಾಬ್ದಾರಿಯೊಂದಿಗೆ ಕುಂದಗೋಳ ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಅವರು ಮುಂದಿನ ಆದೇಶದವರೆಗೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

