
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬ್ರಹ್ಮಾವರ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ, ಹಿರಿಯಡ್ಕದ ಜಿಲ್ಲಾ ಕಾರಾಗೃಹದಿಂದ ಬಿಗಿ ಭದ್ರತೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಶನಿವಾರ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಸುಮಾರು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿದ ಬಳಿಕ ಸಂಜೆ 4 ಗಂಟೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್.ಎ. ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಂತಾಗಿದೆ.

