
ಹನೂರು:ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಮ್.ಎಸ್.ದೊಡ್ಡಿ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯನ್ನು ಗ್ರಾಮದ ಮುಖಂಡ ಎಮ್.ಎಸ್.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಶಿಕ್ಷಣದ ಜೊತೆಗೆ ಕನಿಷ್ಠ ಕುಡಿಯುವ ನೀರನ್ನು ನೀಡಲಾಗದ ಇಂತಹ ದುಸ್ಥಿತಿಯಲ್ಲಿ ನಾವಿದ್ದೇವೆ ಎಂಬುದು ವಿಷಾದನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಗ್ರಾಮದಲ್ಲಿ ನೀರಿನ ಅಭಾವ ತಾರಕಕ್ಕೇರಿದ್ದು, ಶಾಲಾ ಮಕ್ಕಳು ಹನಿ ನೀರಿಗೂ ಪರದಾಡುವಂತಾಗಿದೆ. ಈ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ (EO) ಗಮನಕ್ಕೆ ಹಲವು ಬಾರಿ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದೆ.

ಬೇಸಿಗೆ ಕಾಲವು ಆರಂಭವಾಗುತ್ತಿದ್ದು, ಈಗಲೇ ಎಚ್ಚೆತ್ತುಕೊಂಡು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರಿನ ವ್ಯವಸ್ಥೆ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಸೂಕ್ತ ವ್ಯವಸ್ಥೆ ಮಾಡುತ್ತಾರಾ ಅಥವಾ ಮಕ್ಕಳ ಬಾಯಾರಿಕೆಯನ್ನು ಕಡೆಗಣಿಸುತ್ತಾರಾ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಗ್ರಾಮಸ್ಥರ ಮತ್ತು ಶಾಲಾ ಮಕ್ಕಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಶೀಘ್ರದಲ್ಲೇ ಹನೂರು ತಾಲೂಕು ಕೇಂದ್ರದಲ್ಲಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಅಧಿಕಾರಿಗಳು ಮೂಲಭೂತ ಸೌಕರ್ಯ ಒದಗಿಸುವಲ್ಲಿ ಇಷ್ಟೊಂದು ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ:
ಕಾರ್ತಿಕ್ ಗೌಡ, ಹನೂರು.

