ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಜೃಂಭಣೆಯಿಂದ ವಿಶ್ವ ಪರಿಸರ ದಿನಾಚರಣೆ

Spread the love

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ

ಹನೂರು, ಜೂನ್ 5: ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಪ್ರಕೃತಿಯ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹನೂರಿನ ಕ್ರಿಸ್ತರಾಜ ವಿದ್ಯಾಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹನೂರು ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ ಅವರು ಮಾತನಾಡಿ, ಪರಿಸರವು ಮಾನವಕುಲಕ್ಕೆ ದೊರೆತಿರುವ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಪರಿಸರ ಸಂರಕ್ಷಣೆಯತ್ತ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಸ್ತರಾಜ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ವಂದನೀಯ ಫಾದರ್ ಸಂಜಯ್ ಕುಮಾರ್ ಎಫ್. ಅವರು ಮಾತನಾಡಿ, ಪರಿಸರವನ್ನು ನಾವು ಪ್ರೀತಿಸಬೇಕು. ಮಾನವರು ನಿರಂತರವಾಗಿ ಪ್ರಕೃತಿಗೆ ಹಾನಿ ಉಂಟುಮಾಡುತ್ತಿದ್ದರೂ ಪರಿಸರ ನಮ್ಮನ್ನು ಸಹಿಸಿಕೊಂಡು ಬರುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ಗಣ್ಯರು ಹಾಗೂ ಮುಖ್ಯ ಅತಿಥಿಗಳು ಹಸಿರು ನಿಶಾನೆ ತೋರುವ ಮೂಲಕ ಪರಿಸರ ಜಾಗೃತಿ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಜಾಥಾದಲ್ಲಿ ಸಾವಿರಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ, ವಿವಿಧ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, “ಪ್ರಕೃತಿಯೊಂದಿಗೆ ನಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸೋಣ” ಎಂಬ ಸಂದೇಶವನ್ನು ಸಾರಿದರು.

ಈ ಸಂದರ್ಭದಲ್ಲಿ ವಂದನೀಯ ಫಾದರ್ ಸಂಜಯ್ ಕುಮಾರ್ ಅವರು ಸಾಹಿತ್ಯ ರಚಿಸಿ ಸಂಗೀತ ನಿರ್ದೇಶಿಸಿದ್ದ ಪರಿಸರ ಗೀತೆಗೆ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಮನದಟ್ಟು ಮಾಡಿದರು. ಅಂಬೇಡ್ಕರ್ ವೃತ್ತದಿಂದ ಹನೂರಿನ ಪ್ರಮುಖ ರಸ್ತೆಗಳಲ್ಲಿ ಶಿಸ್ತಿನಿಂದ ಸಾಗಿದ ಜಾಥಾ ಬಳಿಕ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗೆ ಮರಳಿದರು.

ಕಾರ್ಯಕ್ರಮದ ಅಂಗವಾಗಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆಯ ಸಂಕೇತವಾಗಿ ಸಾಂಕೇತಿಕ ಗಿಡ ನೆಡುವ ಕಾರ್ಯಕ್ರಮವೂ ನಡೆಯಿತು. ಹಸಿರು ಪರಿಸರ ನಿರ್ಮಾಣದ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ರಿಸ್ತರಾಜ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ವಂದನೀಯ ಫಾದರ್ ಸಂಜಯ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಾಹೇಬ್ ಗೌಡ, ಸಹಾಯಕ ಸಬ್ ಇನ್ಸ್ಪೆಕ್ಟರ್ ಕಿರಣ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕರಾದ ಚಿನ್ನಪಯ್ಯ ಹಾಗೂ ಮಹೇಶ್, ಕ್ರಿಸ್ತರಾಜ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಶೀಲಾ ಮೇರಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ರಮಣ್ಯ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಜೆಸಿಂತಾ, ಶ್ರೀಮತಿ ಪುಷ್ಪ ಸಗಾಯ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *